ಕುಂದಾನಗರಿಯಲ್ಲಿ ಕಾಂಗ್ರೆಸ್ ಯುವಕ್ರಾಂತಿ ರಣಕಹಳೆ – ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ಭತ್ಯೆ..!

ಕುಂದಾನಗರಿಯಲ್ಲಿ ಕಾಂಗ್ರೆಸ್ ಯುವಕ್ರಾಂತಿ ರಣಕಹಳೆ – ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ಭತ್ಯೆ..!

ಕುಂದಾನಗರಿಯಲ್ಲಿ ಕಾಂಗ್ರೆಸ್  ಯುವಕ್ರಾಂತಿ ಮೂಲಕ ರಣಕಹಳೆ ಮೊಳಗಿಸಿದೆ. ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಯುವ ನಿಧಿ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000 ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ, ನೀಡಲಾಗುವುದು ಎಂದು ರಾಹುಲ್ ಗಾಂಧಿ ಬೆಳಗಾವಿಯಲ್ಲಿ ಘೋಷಣೆ ಮಾಡಿದ್ದಾರೆ. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ಕಾರ್ಡ್ ಅನ್ನು ಸೋಮವಾರ ಬಿಡುಗಡೆ ಮಾಡಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಆಪ್ – ಯಾರಿಗೆ ಯಾವ ಕ್ಷೇತ್ರ?

ಗೃಹಲಕ್ಷ್ಮೀ ಯೋಜನೆ ಮೂಲಕ ಬಡ ಕುಟುಂಬಗಳ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ, ಬಡವರಿಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಹಾಗೂ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಕಾಂಗ್ರೆಸ್ ಈಗಾಗಲೇ ಘೋಷಿಸಿವೆ. ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3,000 ರೂ. ನೀಡುವುದಾಗಿ ಕೆಲವು ದಿನಗಳ ಹಿಂದಷ್ಟೇ ಆಮ್ ಆದ್ಮಿ ಪಕ್ಷ ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ನಿರುದ್ಯೋಗ ಭತ್ಯೆಯ ಭರವಸೆ ನೀಡಿದೆ. ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದು ಉದ್ಯಮಿ ಅದಾನಿಯ ಭಾರತವಲ್ಲ, ಇದು ರೈತರ, ಯುವಕರ ಭಾರತ. ದೇಶದಲ್ಲಿ ಇಂದು ದ್ವೇಷದ ಭಾವನೆ ಬಿತ್ತಲಾಗುತ್ತಿದೆ. ಕರ್ನಾಟಕ ಸರ್ಕಾರ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ. ಕರ್ನಾಟಕ ಸರ್ಕಾರ ಭ್ರಷ್ಟಾಚಾರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ ಗುತ್ತಿಗೆದಾರರ ಬಳಿ 40% ಕಮಿಷನ್ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದರೂ ಈವರೆಗೆ ಅವರು ಕ್ರಮ ಕೈಗೊಂಡಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದರು. ಪದವೀಧರ ಪ್ರತಿ ಯುವಕರಿಗೆ ನಾವು 3 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಲಿದ್ದೇವೆ. 2 ವರ್ಷಗಳ ಕಾಲ ಪ್ರತಿ ತಿಂಗಳು ಪದವೀಧರ ಯುವಕರಿಗೆ 3 ಸಾವಿರ ರೂ. ನೀಡಲಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಇದು ಸಾಧ್ಯ ಎಂದು ಅವರು ಹೇಳಿದರು.

ಇದೇ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆಯವರು, ‘ಎಐಸಿಸಿ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ನಾನು ಇಲ್ಲಿಗೆ ಬಂದಿದ್ದೇನೆ. ಬೆಳಗಾವಿ ಕಾಂಗ್ರೆಸ್‌ಗೆ ಒಂದು ಪವಿತ್ರವಾದ ಭೂಮಿಯಾಗಿದೆ. ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷರಾಗಿ ಮಹಾತ್ಮ ಗಾಂಧೀಜಿ, ಬೆಳಗಾವಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದರು. ಇಂದು ಅದೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನನ್ನನ್ನು ಕುಳ್ಳಿರಿಸಿದ್ದೀರಿ. ಖಂಡಿತವಾಗಿ ಹದಿನೆಂಟು ಸ್ಥಾನವನ್ನು ಬೆಳಗಾವಿಯಲ್ಲಿ ಗೆಲ್ಲುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಭರವಸೆ ವ್ಯಕ್ತಪಡಿಸಿದರು.

suddiyaana