ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಗೆ ಸರ್ಕಸ್ಸು! – ದೆಹಲಿಯಲ್ಲಿ ಸಾಲು ಸಾಲು ಸಭೆ!

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಗೆ ಸರ್ಕಸ್ಸು! – ದೆಹಲಿಯಲ್ಲಿ ಸಾಲು ಸಾಲು ಸಭೆ!

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು  ಅಭ್ಯರ್ಥಿಗಳ ಹೆಸರನ್ನೂ ಘೋಷಣೆ ಮಾಡಿವೆ. ಆದರೆ ಬಿಜೆಪಿಯಲ್ಲಿ ಮಾತ್ರ ಟಿಕೆಟ್ ಹಂಚಿಕೆ ವಿಚಾರ ಕಗ್ಗಂಟಾಗಿದ್ದು ಸಾಲು ಸಾಲು ಸಭೆ ನಡೆಸಲಾಗ್ತಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ಸಂಸದೀಯ ಮಂಡಳಿ ಭಾನುವಾರ ನಿರ್ಣಾಯಕ ಸಭೆ ಸೇರಲಿದೆ. ಈ ಹಿನ್ನೆಲೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಒಂದು ದಿನ ಮೊದಲು, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಎಸ್ ಯಡಿಯೂರಪ್ಪ ಸೇರಿದಂತೆ ಪ್ರಮುಖ ರಾಜ್ಯ ನಾಯಕರೊಂದಿಗೆ ಸಂಭಾವ್ಯ ಅಭ್ಯರ್ಥಿಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇ ಸಂಚು ನಡೆದಿದೆ: ಎಚ್ಡಿಕೆ ಆರೋಪ

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, “ನಾವು ಎಲ್ಲಾ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸುತ್ತೇವೆ. ನಮ್ಮ ಬಳಿ ಜಿಲ್ಲೆ ಮತ್ತು ಕ್ಷೇತ್ರವಾರು ವಿವರಗಳು ಮತ್ತು ಇತ್ತೀಚಿನ ಸಮೀಕ್ಷೆಯ ಫಲಿತಾಂಶಗಳಿವೆ. ಅದನ್ನೆಲ್ಲ ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ನಾಯಕರ ಜತೆ ವಿಸ್ತೃತ ಚರ್ಚೆ ನಡೆಸಲಿದ್ದೇವೆ ಅಂತಾ ಹೇಳಿದ್ದಾರೆ.

ಕೆಲವು ಹೆಸರುಗಳನ್ನು ಹೊರತುಪಡಿಸಿ ಉಳಿದವುಗಳನ್ನು ಮಂಡಳಿಯ ಅನುಮೋದನೆ ಪಡೆದ ನಂತರ ಪ್ರಕಟಿಸಬಹುದು. ಭಾನುವಾರ ಸಂಜೆ 5 ಗಂಟೆಗೆ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.

ನಡ್ಡಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಿಎಂ ಬೊಮ್ಮಾಯಿ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್,  ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಮನ್ಸುಖ್ ಮಾಂಡವಿಯಾ ಹಾಗೂ ಪಕ್ಷದ ಹಿರಿಯ ನಾಯಕ ಅರುಣ್ ಸಿಂಗ್ ಭಾಗವಹಿಸಿದ್ದರು.

suddiyaana