ಮಾಜಿ ಸಿಎಂಗೂ ಇಲ್ಲ, ಮಾಜಿ ಡಿಸಿಎಂಗೂ ಸಿಗ್ಲಿಲ್ಲ – ಟಿಕೆಟ್ ಮಿಸ್.. ಶೆಟ್ಟರ್, ಸವದಿ ರೆಬೆಲ್!
ಚುನಾವಣಾ ಕುರುಕ್ಷೇತ್ರಕ್ಕೆ ಬಿಜೆಪಿ ರಣಕಹಳೆ ಮೊಳಗಿಸಿದೆ. ರಾಜ್ಯದ ಚುಕ್ಕಾಣಿ ಹಿಡಿಯಲು 189 ಕ್ಷೇತ್ರಗಳಿಗೆ ಸಮರಕಲಿಗಳನ್ನ ಕಣಕ್ಕಿಳಿಸಿದೆ. ಆದರೆ ಯುದ್ಧ ಆರಂಭವಾಗುವ ಮುನ್ನವೇ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ಸಿಗದ ಆಕಾಂಕ್ಷಿಗಳು ಮತ್ತು ಹಾಲಿ ಶಾಸಕರು ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅಸಮಾಧಾನ ಹೊರ ಹಾಕಿದ್ದಾರೆ.
ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಮಹೇಶ್ ಕುಮಟಳ್ಳಿ ಪಾಲಾಗಿದೆ. ಇದ್ರಿಂದ ಬೇಸರಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಕ್ಷೇತ್ರದ ಜನರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳೋದಾಗಿ ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಜನರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳೋದಾಗಿ ಹೇಳಿದ್ದಾರೆ. ಸವದಿ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಹೊಸ ಮುಖಗಳಿಗೆ ಹುಮ್ಮಸ್ಸು – ಹಾಲಿಗಳಿಗೆ ಬಿಜೆಪಿ ಟಿಕೆಟ್ ಮಿಸ್ಸು..!
189 ಕ್ಷೇತ್ರಗಳಿಗೆ ಟಿಕೆಟ್ ಅನೌನ್ಸ್ ಆಗಿದ್ದರೂ ಕೂಡ ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರೋದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಸಮಾಧಾನಗೊಂಡಿದ್ದಾರೆ. ಸದ್ಯ ಹೈಕಮಾಂಡ್ ಶೆಟ್ಟರ್ಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ದೆಹಲಿಗೆ ಹೋಗುವ ಮುನ್ನ ಪತ್ರಿಕಾಗೋಷ್ಠಿ ನಡೆಸಿದ ಶೆಟ್ಟರ್, ಟಿಕೆಟ್ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ಯಡಿಯೂರಪ್ಪ ಅವರನ್ನ ಭೇಟಿಯಾಗಬೇಕಿತ್ತು. ಆದ್ರೆ ಬೇಗ ಹೋಗಬೇಕಾಗಿರುವ ಕಾರಣ ಬೆಂಗಳೂರ ಏರ್ಪೋರ್ಟ್ ನಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ಮಂತ್ರಿ ಸ್ಥಾನ ಸಿಗದಿದ್ದರೂ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಕೆಲಸ ಮಾಡುವುದಕ್ಕೆ ಮಂತ್ರಿ ಸ್ಥಾನವೇ ಬೇಕು ಅಂತೇನಿಲ್ಲ. ನನಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ನಾಯಕರಿಂದ ಪಾಸಿಟಿವ್ ರೆಸ್ಪಾನ್ಸ್ ಬರಬಹುದು ಎಂದು ಟಿಕೆಟ್ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ ಸೆಂಟ್ರಲ್ನಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ಮಾಡಿಕೊಂಡು ಬಂದಿದ್ದು, ಈ ಬಾರಿ ಹೊಸ ಮುಖಕ್ಕೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ಚಿಂತನೆ ಮಾಡಿದೆ. ಆದ್ರೆ, ಶೆಟ್ಟರ್, ಈ ಬಾರಿ ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಘಂಟಾಘೋಷವಾಗಿ ಹೇಳಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಸದ್ಯಕ್ಕೆ ಕಾಯ್ದಿರಿಸಿದೆ.