ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ – ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಹಲವು ದಿನಗಳಿಂದ ಉರಿ ಬಿಸಿಲಲ್ಲಿ ಬೆಂದಿದ್ದ ರಾಜ್ಯಕ್ಕೆ ಮಳೆರಾಯ ತಂಪೆರೆದಿದ್ದಾನೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು, ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.
ಇದನ್ನೂ ಓದಿ: ಮೇ ತಿಂಗಳಲ್ಲಿ ಮತ್ತಷ್ಟು ಹೆಚ್ಚಾಗುತ್ತಾ ತಾಪಮಾನ? – ಹವಾಮಾನ ಇಲಾಖೆ ಹೇಳಿದ್ದೇನು?
ಬೆಂಗಳೂರಿನಲ್ಲಿ ಭಾನುವಾರ 2 ಸೆಂ.ಮೀ ಮಳೆ ದಾಖಲಾಗಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ರಾಯಚೂರು, ದಾವಣಗೆರೆ, ಚಾಮರಾಜನಗರ, ರಾಮನಗರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು, ತುಮಕೂರು, ಹಾಸನ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಕೊಂಚ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿಗೆ ಇಂದಿನಿಂದ ಎರಡು ದಿನಗಳ ಮಳೆಯ ಅಲರ್ಟ್ ನೀಡಲಾಗಿದ್ದು, ಬೀದರ್, ಕಲಬುರುಗಿ, ಯಾದಗಿರಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.