ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ – ಇನ್ನೂ ಐದು ದಿನ ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಮಳೆಯ ಆರ್ಭಟ ಶುರುವಾಗಿದೆ. ಬೆಂಗಳೂರಿನ ಹಲವು ಕಡೆ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕಳೆದ ಕೆಲ ದಿನಗಳಿಂದ ರಾಜ್ಯ ರಾಜಧಾನಿಯಲ್ಲಿ ಮಳೆ ಸುರಿಯುತ್ತಿದೆ. ಇನ್ನೂ ಐದು ದಿನ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಲ್ಲಿ ಮಳೆ ನೀರು ಸೋರಿಕೆ!
ಬಸವನಗುಡಿ, ಜಯನಗರ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ಮಿಂಚು ಗುಡುಗಿನ ಆರ್ಭಟವೂ ಜೋರಾಗಿದೆ. ಶಾಂತಿನಗರ, ಮೆಜೆಸ್ಟಿಕ್,ರಾಜಾಜಿನಗರ, ಜಯನಗರ, ವಿಜಯನಗರ, ಚಂದ್ರಲೇಔಟ್, ನಂದಿನಿ ಲೇಔಟ್, ಬಸವೇಶ್ವರ ನಗರ, ಕಾಮಾಕ್ಷಿಪಾಳ್ಯ, ನಾಗರಬಾವಿ, ಬನಶಂಕರಿ, ಬಸವನಗುಡಿ, ಶ್ರೀನಗರ, ಗಿರಿನಗರ, ಹೆಬ್ಬಾಳ, ಆರ್.ಟ.ನಗರ, ಜಯನಗರ, ಮತ್ತಿಕೆರೆ ಸೇರಿದಂತೆ ಹಲವೆಡೆ ಮಳೆ ಸುರಿದೆ. ಮಳೆಯಿಂದಾಗಿ ವಾಹನ ಸವಾರರ ಮೇಲೆ ಪರಿಣಾಮ ಬೀರಿದ್ದು, ಕೆಲವೆಡೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಹಾಗಾಗಿ ವಾಹನ ಸವಾರರು ಮಳೆರಾಯನಿಗೆ ಹಿಡಿ ಶಾಪ ಹಾಕಿದ್ದಾರೆ.
ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ದಕ್ಷಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ರಾಮಾನಗರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ಜಿಲ್ಲೆಗಳಿಗರ ಮಳೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಐಎಂಡಿ ಅಧಿಕಾರಿಗಳ ಪ್ರಕಾರ, ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ನಗರದಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನವು 32-33 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿರುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ