ದಕ್ಷಿಣ ಭಾರತದಲ್ಲಿ ಮುಂದುವರಿದ ವರುಣನ ಅಬ್ಬರ – ಹಠಾತ್ ಪ್ರವಾಹ ಮುನ್ಸೂಚನೆ
ನವದೆಹಲಿ: ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟುಮಾಡಿದ್ದ ವರುಣ ಈಗ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾನೆ. ಕಳೆದ ಒಂದು ವಾರದಿಂದ ಕರ್ನಾಟಕ, ತೆಲಂಗಾಣ, ಕೇರಳದಲ್ಲಿ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿದೆ. ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇದೀಗ ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್ ಅನ್ನು ಘೋಷಿಸಲಾಗಿದೆ.
ಇದನ್ನೂ ಓದಿ: ನೀರಲ್ಲಿ ಹುಚ್ಚಾಟ ತೋರಿ ಪ್ರಾಣ ಹೋದರೂ ಲೆಕ್ಕಕ್ಕಿಲ್ಲ – ಮೋಜು ಮಸ್ತಿ ನೆಪದಲ್ಲಿ ಜೀವ ಹೋಗಬಹುದು ಹುಷಾರ್..!
ಕರ್ನಾಟಕದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ತಗ್ಗು ಪ್ರದೇಶಗಳಿಗೆ ಭಾರಿ ಪ್ರಮಾಣದ ನೀರು ನುಗ್ಗಿದೆ. ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೇ ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ ಮುನ್ಸೂಚನೆ ನೀಡಿದೆ.
ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ತೆಲಂಗಾಣದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳವಾರ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಇಬ್ಬರು ಬಾಲಕಿಯರು ಕೊಚ್ಚಿಕೊಂಡು ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ರಾಜ್ಯದ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.