ಕರಾವಳಿ, ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ – ಅಪಾಯಮಟ್ಟ ಮೀರಿ ಹರಿಯುತ್ತಿವೆ ನದಿಗಳು, ರೆಡ್ ಅಲರ್ಟ್ ಘೋಷಣೆ
ಬೆಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ನಿರಂತವಾಗಿ ಮಳೆ ಸುರಿಯುತ್ತಿದೆ. ಗುರುವಾರ ಕೂಡ ಎಡೆಬಿಡದೆ ಮಳೆ ಸುರಿಯುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ, ಮುಂದಿನ 24 ಗಂಟೆಗಳ ಕಾಲ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ದಕ್ಷಿಣ ಕೊಂಕಣ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಮುಂದಿನ ಎರಡು ದಿನಗಳ ಕಾಲ ‘ರೆಡ್’ ಅಲರ್ಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 200 ಮಿ.ಮೀ.ಗೂ ಅಧಿಕ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜುಲೈ 29ರವರೆಗೆ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ದೆಹಲಿಯಲ್ಲಿ ‘ಡ್ರೈಡೇ’ ಆಚರಣೆ – ನಾಲ್ಕು ದಿನಗಳ ಕಾಲ ಮದ್ಯ ಇರೋದಿಲ್ಲ!
ಇನ್ನು ಬೆಳಗಾವಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಡಗು, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಹಾಸನ, ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವು ತಾಲೂಕುಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪ್ರವಾಹ ಸ್ಥಿತಿ ಮುಂದುವರಿದಿದೆ. ಈ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ಗುರುವಾರ ಕೂಡ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆಯನ್ನು ನೀಡಲಾಗಿದ್ದು, ಜಲಾವೃತವಾಗಿರುವ ಪ್ರದೇಶಗಳಿಂದ ತೆರವುಗೊಳಿಸುವಂತೆ ಮನವಿ ಮಾಡಲಾಗಿದೆ.
ಇನ್ನು ಸುಬ್ರಹ್ಮಣ್ಯ ಬಳಿಯ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಅಪಾಯದ ಮಟ್ಟ ಮೀರಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸ್ನಾನಘಟ್ಟಕ್ಕೆ ಭೇಟಿ ನೀಡುವ ಭಕ್ತರು ಮಳೆ ಕಡಿಮೆಯಾಗುವವರೆಗೆ ದೇಗುಲಕ್ಕೆ ಭೇಟಿ ನೀಡದಂತೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೊಂದೆಡೆ ಶೃಂಗೇರಿಯಲ್ಲಿ ತುಂಗಾ ನದಿಯು ಸಹ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಚಿಕ್ಕಮಗಳೂರಿನ ಕಲ್ಲತ್ತಿಗಿರಿ ಜಲಪಾತದಲ್ಲಿ ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಪಾತಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಇನ್ನೊಂದೆಡೆ ದತ್ತಪಾದ ರಸ್ತೆ ಬಳಿ ಭೂಕುಸಿತ ಸಂಭವಿಸಿದೆ.
ಯಾದಗಿರಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ಹಾಗೂ ಭೀಮಾ ನದಿ ಮೈದುಂಬಿ ಹರಿಯುತ್ತಿವೆ. ಇದರಿಂದ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಪ್ರವಾಹದ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದ್ದು, ನದಿಯ ಪಾತ್ರದ ಕಡೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಅಲ್ಲದೇ ಯಾದಗಿರಿ, ಗುರುಮಠಕಲ್, ಶಹಾಪುರ ಹಾಗೂ ವಡಗೇರಾ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.