ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ದಳಪಡೆಗೆ ಬಿಗ್ ಶಾಕ್ – ಜೆಡಿಎಸ್ ಗೆ ರಾಜೀನಾಮೆ ನೀಡಿದ ಮುಸ್ಲಿಂ ನಾಯಕರು
2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡಲು ಬಿಜೆಪಿ ಮತ್ತು ಜೆಡಿಎಸ್ ನಿರ್ಧರಿಸಿವೆ. ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರ ಜೊತೆ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಮಾತುಕತೆ ನಡೆಸಿದ್ದು ಮೈತ್ರಿ ಫೈನಲ್ ಆಗಿದೆ. ಆದರೆ ಯಾರಿಗೆ ಎಷ್ಟು ಸೀಟು ಅನ್ನೋ ಬಗ್ಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ. ಹೀಗೆ ಹೊಂದಾಣಿಕೆ ರಾಜಕಾರಣಕ್ಕೆ ಸಜ್ಜಾಗುತ್ತಿರುವಾಗಲೇ ಮುಸ್ಲಿಂ ನಾಯಕರು ಜೆಡಿಎಸ್ ಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ಇದನ್ನೂ ಓದಿ : ನಮ್ಮನ್ನು ಬಿಜೆಪಿಯ ಬಿ ಟೀಂ ಎನ್ನುವ ಕಾಂಗ್ರೆಸ್ ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ – ಜೆಡಿಎಸ್ ವಾಗ್ದಾಳಿ
ಎನ್ ಡಿಎ ಜೊತೆ ಮೈತ್ರಿ ಅಧಿಕೃತವಾಗುತ್ತಿದ್ದಂತೆ ಜೆಡಿಎಸ್ನ ಕೆಲವು ಅಲ್ಪಸಂಖ್ಯಾತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷವನ್ನು ತೊರೆಯುವ ತೀರ್ಮಾನ ಕೈಗೊಂಡಿದ್ದಾರೆ. ಪಕ್ಷದ ಹಿರಿಯ ರಾಜ್ಯ ಉಪಾಧ್ಯಕ್ಷ ಸಯ್ಯದ್ ಶಫಿಉಲ್ಲಾ ಅವರು ಪಕ್ಷದಲ್ಲಿನ ಎಲ್ಲಾ ಹುದ್ದೆಗಳಿಗೆ ಮತ್ತು ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನುಳಿದಂತೆ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎನ್.ಎಂ.ನಬಿ, ರಾಜ್ಯ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ನಾಸೀರ್ ಹುಸೇನ್, ಯುವ ಘಟಕದ ಕಾರ್ಯಾಧ್ಯಕ್ಷ ಎನ್.ಎಂ.ನೂರ್, ಮುಖಂಡರಾದ ಮೊಹಿದ್ ಅಲ್ತಾಫ್ ಸಹ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮೈತ್ರಿ ಪ್ರಕ್ರಿಯೆ ಅಧಿಕೃತಗೊಳಿಸಿದ ಬೆನ್ನಲ್ಲೇ ನಗರದ ಕುಮಾರಕೃಪಾದಲ್ಲಿ ಪಕ್ಷದ ಅಲ್ಪಸಂಖ್ಯಾತ ನಾಯಕರು ಸಭೆ ನಡೆಸಿ ಪಕ್ಷದ ವರಿಷ್ಠರ ನಡೆಯನ್ನು ವಿರೋಧಿಸಿದರು. ಸುಧೀರ್ಘ ಚರ್ಚೆಯ ಬಳಿಕ ಪಕ್ಷಕ್ಕೆ ರಾಜೀನಾಮೆ ನೀಡುವ ತೀರ್ಮಾನ ಕೈಗೊಂಡರು. ಸಯ್ಯದ್ ಶಫಿಉಲ್ಲಾ ಅವರು ಪಕ್ಷದ ಹಿರಿಯ ರಾಜ್ಯ ಉಪಾಧ್ಯಕ್ಷ ಸೇರಿದಂತೆ ಪಕ್ಷದ ಎಲ್ಲಾ ಹುದ್ದೆಗಳಿಗೆ ಮತ್ತು ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಪತ್ರ ಬರೆದು ರಾಜೀನಾಮೆ ಪತ್ರ ರವಾನಿಸಿದ್ದಾರೆ. ಇನ್ನುಳಿದವರು ಶೀಘ್ರದಲ್ಲಿಯೇ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ.
2018ರಲ್ಲಿ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾಗ ಬಿಜೆಪಿ ಆಪರೇಷನ್ ಕಮಲ ನಡೆಸಿ ಸರ್ಕಾರವನ್ನ ಪತನಗೊಳಿಸಿತ್ತು. ಈಗ ಬಿಜೆಪಿ ಜತೆ ಹೋಗಲು ನಮಗೆ ಇಷ್ಟವಿಲ್ಲ. ಮಣಿಪುರ ಸೇರಿದಂತೆ ದೇಶದ ಹಲವೆಡೆ ಹಿಂಸಾಚಾರ ನಡೆದರೂ ಅದನ್ನು ನಿಭಾಯಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಹೀಗಿದ್ದರೂ ಬಿಜೆಪಿ ಜತೆ ಹೋಗಿರುವುದು ಸಮಂಜಸವಲ್ಲ. ಹೀಗಾಗಿ ವರಿಷ್ಠರ ನಡೆ ವಿರೋಧಿಸಿ ಪಕ್ಷವನ್ನು ತೊರೆಯುತ್ತಿದ್ದೇವೆ. ಇನ್ನು ಹಲವು ಮುಖಂಡರು ಪಕ್ಷದ ತೊರೆಯಲು ಮುಂದಾಗಿದ್ದು, ಅವರೊಂದಿಗೆ ಚರ್ಚಿಸಿ ಮುಂದಿನ ದಿನದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದ್ದಾರೆ.