3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ – ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಸಿಎಂ ಆಕ್ರೋಶ

3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ – ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಸಿಎಂ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ಕಿಚ್ಚು ಕಾವೇರುತ್ತಿದೆ. ಕಾವೇರಿ ನೀರಿಗಾಗಿ ರಾಜ್ಯದ ಹಲವು ಭಾಗಗಳಲ್ಲಿ ಹೋರಾಟ ನಡೆಯುತ್ತಿದೆ. ಈ ಬೆನ್ನಲ್ಲೇ ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು CWRC ಆದೇಶ ನೀಡಿದೆ. ಇದೀಗ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸದ್ಯ ನಮ್ಮ ಬಳಿ ನೀರು ಇಲ್ಲ. ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ.ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಸಿದ್ಧರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾವೇರಿಗಾಗಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಕುಮಾರಸ್ವಾಮಿ – ಬಿಜೆಪಿ, ಜೆಡಿಎಸ್ ನಿಂದ ಇಂದು ಪ್ರತಿಭಟನೆ

ನೀರು ಹಂಚಿಕೆಗೆ ಸಂಬಂಧಿಸಿದ ವಿವಾದವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಅಂತರರಾಜ್ಯ ಜಲವಿವಾದ ಕಾಯ್ದೆ ಸ್ಪಷ್ಟವಾಗಿ ಹೇಳಿದೆ. ನಾವು ಕಳೆದ ಒಂದು ತಿಂಗಳಿನಿಂದ ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಸ್ಥಿಕೆಗಾಗಿ ಮನವಿ ಮಾಡುತ್ತಿದ್ದೇವೆ. ಅವರ ಭೇಟಿಗಾಗಿ ಅವಕಾಶ ಕೋರಿದ್ದೇವೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೂಡಾ ಪತ್ರ ಬರೆದಿದ್ದಾರೆ. ಇದು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದವಾದ ಕಾರಣ ಕೇಂದ್ರ ಸರ್ಕಾರ ಮಾತ್ರ ಮಧ್ಯಸ್ಥಿಕೆವಹಿಸಿ ಪರಿಹರಿಸಲು ಸಾಧ್ಯ. ಹಿಂದೆ ಇಂತಹದ್ದೇ ಪರಿಸ್ಥಿತಿ ಉದ್ಭವಿಸಿದಾಗ ವಾಸ್ತವಾಂಶವನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ತಜ್ಞರ ತಂಡವನ್ನು ಕಳಿಸಿದ್ದ ನಿದರ್ಶನಗಳಿವೆ. ಕೇಂದ್ರ ಸರ್ಕಾರ ಈಗಲಾದರೂ ಮಧ್ಯಪ್ರವೇಶ ಮಾಡಿ ಈ ಬಿಕ್ಕಟ್ಟನ್ನು ಪರಿಹರಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

Shwetha M