ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆ! – ಮುಂದಿನ 15 ದಿನ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಹರಿಸಲು ಆದೇಶ
ನವದೆಹಲಿ: ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು, ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳು ಭರ್ತಿಯಾಗದೇ ರೈತರು ಸಂಕಷ್ಟದಲ್ಲಿದ್ದಾರೆ. ಈ ನಡುವೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ.
ರಾಜ್ಯದಲ್ಲಿ ಮಳೆಕೊರತೆಯಿಂದಾಗಿ ನೀರಿನ ಅಭಾವ ಕಾಡುತ್ತಿದೆ. ಈಗಾಗಲೇ ಕರ್ನಾಟಕದ 193 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸಲಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ. ಈ ನಡುವೆಯೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.
ಇದನ್ನೂ ಓದಿ: ಬರದಿಂದಾಗಿ ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಕುಸಿತ! – ಬೇರೆ ರಾಜ್ಯದ ಮೊರೆ ಹೋಗಲಿದ್ಯಾ ಸರ್ಕಾರ
ಬುಧವಾರ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆ ನಡೆದಿದೆ. ಈ ಸಭೆಯಲ್ಲಿ ತಮಿಳುನಾಡು 13 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚಿಸುವಂತೆ ಮನವಿ ಮಾಡಿತ್ತು. ಕರ್ನಾಟಕದಲ್ಲಿ ನೀರಿನ ಅಭಾವ ಕುರಿತು ಅಧಿಕಾರಿಗಳು ಮನವರಿಕೆ ಮಾಡಿದರು. ಎರಡು ಕಡೆ ವಾದ ಆಲಿಸಿದ ಸಮಿತಿ ಅಕ್ಟೋಬರ್,16 ರಿಂದ ಅಕ್ಟೋಬರ್ 30ರವರೆಗೆ ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ.