ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ – ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಖಾಸಗಿ ಬಸ್ಗಳು!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪದೇ ಪದೆ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇದೆ. ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಬೆಂಕಿ ದುರಂತ ಮಾಸುವ ಮುನ್ನವೇ ಈ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ವೀರಭದ್ರ ನಗರದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಖಾಸಗಿ ಬಸ್ಗಳು ಹೊತ್ತಿ ಉರಿದಿವೆ.
ಬೆಂಗಳೂರಿನ ವೀರಭದ್ರ ನಗರದಲ್ಲಿ ಸುಮಾರು 10 ಖಾಸಗಿ ಬಸ್ಗಳನ್ನು ನಿಲ್ಲಿಸಲಾಗಿತ್ತು. ಸೋಮವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. 10 ಬಸ್ ಗಳ ಪೈಕಿ ಆರು ಬಸ್ಗಳು ಸುಟ್ಟು ಭಸ್ಮವಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಹಾವು ಮನೆ ಸೇರಿತು ಅಂತಾ ಹೊಗೆ ಹಾಕಿದ್ರು.. – ನಾಗಪ್ಪನ ಶಾಪಕ್ಕೆ ಇಡೀ ಮನೆಯೇ ಭಸ್ಮ!
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಸ್ಥಳದಲ್ಲಿದ್ದವರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಘಟನ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇಲ್ಲಿವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪದೇ ಪದೇ ಬೆಂಕಿ ಅವಘಡಗಳು ಕಾಣಿಸಿಕೊಳ್ಳುತ್ತಲೇ ಇದೆ. ಕಳೆದ ಕೆಲವು ದಿನಗಳ ಹಿಂದೆ ಕೋರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು.