ಬಿಲ್ಕಿಸ್ ಬಾನು ಪ್ರಕರಣ – ಅಪರಾಧಿಗಳ ಬಿಡುಗಡೆಗೆ ಗುಜರಾತ್ ಸರ್ಕಾರ ನೀಡಿದ್ದ ಅನುಮತಿ ರದ್ದುಗೊಳಿಸಿದ ‘ಸುಪ್ರೀಂ’
ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ವಿನಾಯತಿ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಇದನ್ನೂ ಓದಿ: ಬಾಂಗ್ಲಾದೇಶ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಶೇಖ್ ಹಸೀನಾ – ಸತತ 5ನೇ ಬಾರಿಗೆ ಮರು ಆಯ್ಕೆ!
2002ರ ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಕೋಮುಗಲಭೆಯಿಂದ ತಪ್ಪಿಸಿಕೊಂಡು ಹೋಗುತ್ತಿದ್ದ ವೇಳೆ ಬಿಲ್ಕಿಸ್ ಬಾನು ಅವರಿಗೆ 21 ವರ್ಷ ವಯಸ್ಸಾಗಿತ್ತು ಮತ್ತು ಅವರು ಆಗ ಐದು ತಿಂಗಳ ಗರ್ಭಿಣಿಯಾಗಿದ್ದರು. ಗಲಭೆಯಲ್ಲಿ ಸಾವಿಗೀಡಾದ ಏಳು ಕುಟುಂಬ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು.
ಆರೋಪ ಸಾಬೀತಾಗಿ 11 ಅಪರಾಧಿಗಳು 15ಕ್ಕೂ ಹೆಚ್ಚು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದರು. ಗುಜರಾತ್ ಸರ್ಕಾರ ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆಗೆ ಅನುಮತಿ ನೀಡಿತ್ತು. ಹೀಗಾಗಿ 2022ರ ಆಗಸ್ಟ್ 15ರಂದು ಅವರೆಲ್ಲರೂ ಗೋಧ್ರಾ ಉಪ ಕಾರಾಗೃಹದಿಂದ ಬಿಡುಗಡೆಯಾಗಿದ್ದರು. ಈ ಆದೇಶವು ವಿರೋಧ ಪಕ್ಷ ಹಾಗೂ ಸಾರ್ವಜನಿಕರ ಖಂಡನೆ ಹಾಗೂ ಆಕ್ರೋಶಕ್ಕೆ ಗುರಿಯಾಗಿತ್ತು.
ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸಂತ್ರಸ್ತೆ ಬಿಲ್ಕಿಸ್ ಬಾನು ಅವರು ಕಳೆದ ವರ್ಷ ನವೆಂಬರ್ 30 ರಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅಪರಾಧಿಗಳ ಬಿಡುಗಡೆಯು ಸಮಾಜದ ಆತ್ಮಸಾಕ್ಷಿಯನ್ನು ಅಲ್ಲಾಡಿಸಿದೆ ಎಂದು ಹೇಳಿದ್ದರು.
ಇದೀಗ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠವು, ಗುಜರಾತ್ ಸರ್ಕಾರವು ಅಪರಾಧಿಗಳಿಗೆ ಕ್ಷಮಾಪಣೆ ನೀಡಿರುವುದು ಸೂಕ್ತ ಸರ್ಕಾರವಲ್ಲ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ, ಗುಜರಾತ್ ರಾಜ್ಯವು ಈ ರೀತಿಯ ಆದೇಶಗಳನ್ನು ನೀಡಲು ಸಮರ್ಥವಾಗಿಲ್ಲ. ಅಲ್ಲದೆ, ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆ ಬಿಲ್ಕಿಸ್ ಬಾನು ಅವರು ಸಲ್ಲಿಸಿರುವ ಅರ್ಜಿಯು ಸಮರ್ಥವಾಗಿದೆ ಎಂದು ಕೋರ್ಟ್ ಹೇಳಿದೆ.