ರಾಮಮಂದಿರ ಲೋಕಾರ್ಪಣೆಗೆ ಕ್ಷಣಗಣನೆ – ಉತ್ತರ ಪ್ರದೇಶದಲ್ಲಿ ಜ. 22 ರಂದು ಶಾಲಾ, ಕಾಲೇಜುಗಳಿಗೆ ರಜೆ, ಮದ್ಯದಂಗಡಿ ಬಂದ್!
ಕೋಟಿ ಕೋಟಿ ಹಿಂದೂಗಳ ಕನಸು ನನಸಾಗುತ್ತಿದೆ. ಆಯೋಧ್ಯೆ ರಾಮಮಂದಿರದ ಉದ್ಘಾಟನಗೆ ಕ್ಷಣಗಣನೆ ಆರಂಭವಾಗುತ್ತಿದೆ. ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ನಡೆಯಲಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ಮಣಿಪುರದಲ್ಲಿ ಅನುಮತಿ ನಿರಾಕರಣೆ!
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ದಿನದಂದು ರಾಜ್ಯದಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು ಎಂದು ಹೇಳಿದ್ದರು. ಇದೀಗ ಈ ಶುಭಸಮಾರಂಭದಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಯೋಗಿ ಅದಿತ್ಯನಾಥ್ ಅವರು, ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಒಂದು ರಾಷ್ಟ್ರೀಯ ಉತ್ಸವ ಆಗಿದೆ. ಶತಮಾನಗಳ ಕಾಯುವಿಕೆಯ ನಂತರ ಈ ಶುಭ ಗಳಿಗೆ ಬಂದಿದೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳನ್ನು ದಿವ್ಯಸ್ವರೂಪದಲ್ಲಿ ಅಲಂಕರಿಸಲಾಗುವುದು. ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜನವರಿ 22 ರಂದು ರಜೆ ಘೋಷಿಸಲು ಸೂಚನೆ ನೀಡಿದ್ದೇನೆ. ಬನ್ನಿ ಎಲ್ಲರೂ ಒಟ್ಟಾಗಿ ರಾಮೋತ್ಸವವನ್ನು ಆಚರಿಸೋಣ ಎಂದು ಕರೆ ನೀಡಿದ್ದಾರೆ.