ಸಿಕ್ಸರ್ ಸಿಂಗ್ ಚುನಾವಣಾ ಅಖಾಡಕ್ಕೆ ಎಂಟ್ರಿ – ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ನಿಲ್ಲುತ್ತಾರಾ ಯುವರಾಜ್ ಸಿಂಗ್?
ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಚುನಾವಣಾ ಅಖಾಡಕ್ಕೆ ಧುಮುಕಲು ಮುಹೂರ್ತ ಕೂಡಿ ಬಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಯುವರಾಜ್ ಸಿಂಗ್ ಸ್ಪರ್ಧಿಸಲಿದ್ದಾರೆ. ಕೇಂದ್ರ ಸಾರಿಗೆ ಖಾತೆಯ ಸಚಿವ ನಿತಿನ್ ಗಡ್ಕರಿ ಅವರು ಇತ್ತೀಚೆಗೆ ಯುವರಾಜ್ ಸಿಂಗ್ ಕುಟುಂಬದವರನ್ನು ಭೇಟಿಯಾಗಿದ್ದರು. ಈ ಭೇಟಿಯ ಬೆನ್ನಲ್ಲೇ ಸಿಕ್ಸರ್ ಸಿಂಗ್ ಬಿಜೆಪಿ ಪರ ಕಣಕ್ಕಿಳಿಯಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಇದನ್ನೂ ಓದಿ: ಮನವಿ ಮಾಡಿದರೆ ಮಾತ್ರ ರನೌಟ್ ತೀರ್ಪು ಕೊಡೋದಾ? – ಅಂಪೈರ್ ತೀರ್ಪಿಗೆ ಆಸ್ಟ್ರೇಲಿಯಾ ಆಟಗಾರರ ಆಕ್ರೋಶ
ಪಂಜಾಬ್ನ ಗುರುದಾಸ್ಪುರ ಲೋಕಸಭಾ ಕ್ಷೇತ್ರದಿಂದ ಯುವರಾಜ್ ಸಿಂಗ್ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಇದೇ ಕಾರಣದಿಂದಾಗಿ ಅವರು ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗುರುದಾಸ್ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಬಾಲಿವುಡ್ ನಟ ಸನ್ನಿ ಡಿಯೋಲ್ ಜಯ ಸಾಧಿಸಿದ್ದರು. ಇದೀಗ ಹಾಲಿ ಸಂಸದರ ಸ್ಥಾನಕ್ಕೆ ಯುವರಾಜ್ ಸಿಂಗ್ ಅವರನ್ನು ಕರೆತರಲಾಗುತ್ತಿದೆ ಎಂಬ ವದಂತಿ ಹರಿದಾಡುತ್ತಿದೆ. ಇದರ ಜೊತೆಗೆ ಯುವರಾಜ್ ಸಿಂಗ್ ಅವರ ರಾಜಕೀಯ ಎಂಟ್ರಿ ಸುದ್ದಿ ದಿನದಿಂದ ದಿನಕ್ಕೆ ಮಹತ್ವ ಪಡೆದುಕೊಳ್ಳುತ್ತಿದೆ.
ಇನ್ನು ರಾಜಕೀಯ ಅಖಾಡಕ್ಕೆ ಸಿಕ್ಸರ್ ಸಿಂಗ್ ಎಂಟ್ರಿ ಕೊಟ್ಟಿದ್ದೇ ಹೌದಾದರೆ, ಕ್ರಿಕೆಟ್ ಅಂಗಳದಿಂದ ರಾಜಕೀಯದಲ್ಲಿ ಇನಿಂಗ್ಸ್ ಆರಂಭಿಸಿದ ಕೆಲವೇ ಕೆಲವು ಆಟಗಾರರಲ್ಲಿ ಯುವರಾಜ್ ಸಿಂಗ್ ಹೆಸರು ಕೂಡ ಸೇರ್ಪಡೆಯಾಗಲಿದೆ. ಈಗಾಗಲೇ ಟೀಮ್ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದರೆ, ಹರ್ಭಜನ್ ಸಿಂಗ್ ಎಎಪಿ ಪಕ್ಷದ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇನ್ನು ಮೊಹಮ್ಮದ್ ಅಜರುದ್ದೀನ್ ಮತ್ತು ಕೀರ್ತಿ ಆಜಾದ್ ಸೇರಿದಂತೆ ಹಲವಾರು ಮಾಜಿ ಕ್ರಿಕೆಟಿಗರು ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಇದೀಗ ಯುವರಾಜ್ ಸಿಂಗ್ ಹೆಸರು ರಾಜಕೀಯ ಪಕ್ಷದೊಂದಿಗೆ ತಳುಕು ಹಾಕಿಕೊಂಡಿದ್ದು, ಅವರ ಮುಂದಿನ ನಡೆಯೇನು ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ.
ಟೀಮ್ ಇಂಡಿಯಾ ಪರ 40 ಟೆಸ್ಟ್ ಪಂದ್ಯಗಳನ್ನಾಡಿರುವ ಯುವರಾಜ್ ಸಿಂಗ್ 1900 ರನ್ ಹಾಗೂ 9 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ 304 ಏಕದಿನ ಪಂದ್ಯಗಳಿಂದ 8701 ರನ್ಸ್ ಹಾಗೂ 111 ವಿಕೆಟ್ಗಳನ್ನು ಪಡೆದಿದ್ದಾರೆ. ಇದರ ಜೊತೆಗೆ ಟಿ20 ಕ್ರಿಕೆಟ್ನಲ್ಲಿ 58 ಪಂದ್ಯಗಳನ್ನಾಡಿರುವ ಯುವಿ 1177 ರನ್ಸ್ ಹಾಗೂ 28 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇವೆಲ್ಲಕ್ಕಿಂತ ಮುಖ್ಯವಾಗಿ 2007ರ ಟಿ20 ವಿಶ್ವಕಪ್ ಹಾಗೂ 2011 ರ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಯುವರಾಜ್ ಸಿಂಗ್ ಮಹತ್ವದ ಪಾತ್ರವಹಿಸಿದ್ದರು.