ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ – ಪ್ರಕರಣ ಸಿಐಡಿಗೆ ವರ್ಗಾವಣೆ
ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಇದೀಗ ಈ ಎಫ್ಐಆರ್ಗೆ ಸಂಬಂಧಿಸಿ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ.
ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಇದೀಗ ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.
ಇದನ್ನೂ ಓದಿ: ಪಾತಾಳಕ್ಕೆ ಕುಸಿದ ಪಾಕ್ ಆರ್ಥಿಕತೆ – ಒಂದು ಸೈಡ್ ಮಾತ್ರ ನೋಟು ಪ್ರಿಂಟ್!
ಇನ್ನು ಈ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಂತ್ರಸ್ತೆಯ ತಾಯಿ ಈ ಹಿಂದೆ 53 ಮಂದಿ ವಿರುದ್ಧ ದೂರು ನೀಡಿದ್ದರು. ಆ ಪೈಕಿ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳೂ ಇದ್ದರು ಎನ್ನಲಾಗಿದೆ. ಈ ಮಧ್ಯೆ, ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥರು ಇರಬಹುದು ಎಂದು ಕೆಲವರು ಹೇಳುತ್ತಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದಾರೆ.