SSLC ಪರೀಕ್ಷೆಯಲ್ಲಿ ನೀಡಿದ್ದ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ರದ್ದತಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ!
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ನೀಡಿಲಾಗಿತ್ತು. ಆದರೆ ಇದೀಗ ಈ ಗ್ರೆಸ್ ಮಾರ್ಕ್ಸ್ ಅನ್ನು ಮುಂದಿನ ವರ್ಷದಿಂದ ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಬಾರಿಯ SSLC ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ್ದಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಇದರ ಬಗ್ಗೆ ರಾಜ್ಯಾದ್ಯಂತ ತೀವ್ರ ಚರ್ಚೆಯಾದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಾರೆ.
ಸಿಎಂ ಸಭೆಯಲ್ಲಿ SSLC ಪರೀಕ್ಷೆಯಲ್ಲಿ 20%ರಷ್ಟು ಗ್ರೇಸ್ ಮಾರ್ಕ್ಸ್ ನೀಡಿದರ ಬಗ್ಗೆ ಚರ್ಚೆ ನಡೆಸಲಾಗಿದೆ. ಯಾರನ್ನ ಕೇಳಿ ಹೆಚ್ಚುವರಿ ಅಂಕ ಕೊಟ್ರಿ. ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿಯನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗ್ರೇಸ್ ಮಾರ್ಕ್ಸ್ ಕೊಡೋದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರ್ತೀವೆ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್ ಮಾರ್ಕ್ಸ್ ಕೊಡುವ ಬಗ್ಗೆ ಮರು ಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದಾರೆ.
ಇನ್ನು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ್ದಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿಕೆ ನೀಡಿದ್ದಾರೆ. ಯಾವಾಗಲೂ ಗ್ರೇಸ್ ಮಾರ್ಕ್ಸ್ ಶೇಕಡಾ 5ರಷ್ಟು ಇತ್ತು. ಕೊರೊನಾ ಸಂದರ್ಭದಲ್ಲಿ ಶೇಕಡಾ 10 ರಷ್ಟು ಮಾಡಲಾಗಿತ್ತು. ಈ ಬಾರಿ ವಿದ್ಯಾರ್ಥಿಗಳಿಗೆ ಕಾನ್ಫಿಡೆಂಟ್ ಕೊಟ್ಟು ಪಾಸ್ ಮಾಡಲು ಶೇಕಡಾ 20 ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಇದು ಈ ವರ್ಷಕ್ಕೆ ಯಾವ ಸಮಸ್ಯೆ ಇಲ್ಲ. ಮುಂದಿನ ವರ್ಷದಿಂದ ಶೇ.20 ಗ್ರೇಸ್ ಮಾರ್ಕ್ಸ್ ಇರಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.
ಮಕ್ಕಳ ಬೆಳವಣಿಗೆ ದೃಷ್ಟಿಯಿಂದ ಇದನ್ನ ಮಾಡಿದ್ದೆವು. ಸದ್ಯ ಇದು ಬೇಡ ಅನ್ನೋದು ಇದೆ. ಹೀಗಾಗಿ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರಲ್ಲ. ಗ್ರೇಸ್ ಮಾರ್ಕ್ಸ್ನಿಂದ ಮಕ್ಕಳಲ್ಲಿ ಇಂಫ್ರೂವ್ ಮೆಂಟ್ ಇತ್ತು. ಆದರೆ ಈಗ ಬೇಡ ಅನ್ನೋ ನಿಲುವಿಗೆ ಬಂದಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.