ನಾಗರ ಪಂಚಮಿ ನಾಡಿಗೆ ದೊಡ್ಡದು – ಶ್ರಾವಣ ಮಾಸದ ಮೊದಲ ಹಬ್ಬದ ವಿಶೇಷತೆಯೇನು?
ಆಗಸ್ಟ್ 9. ಶುಕ್ರವಾರ. ನಾಗರ ಪಂಚಮಿ ಹಬ್ಬದ ಸಡಗರ. ನಾಗರ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿರುವ ಜಾಗಕ್ಕೆ ಹೋಗಿ ಪೂಜೆ ಮಾಡುತ್ತಾರೆ. ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬ ಅನ್ನೋ ಪ್ರತೀತಿ ಸಹ ಇದೆ.
ಇದನ್ನೂ ಓದಿ: ನಾಡಿನೆಲ್ಲೆಡೆ ನಾಗರ ಪಂಚಮಿ ಹಬ್ಬದ ಸಂಭ್ರಮ – ಸರ್ಪಗಳ ಪೂಜೆ ಹಿಂದಿದೆ ರೋಮಾಂಚನಗೊಳಿಸುವ ಪುರಾಣ
ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ. ನಾಗರಪಂಚಮಿಯಂದು ಉಪವಾಸ ಮಾಡುತ್ತಾರೆ. ಈ ಉಪವಾಸ ಮಹತ್ವದ ಹಿಂದೆಯೂ ಒಂದು ಪೌರಾಣಿಕ ಹಿನ್ನೆಲೆ ಕೂಡಾ ಇದೆ. ಈ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ ಹೊಂದಿದನು. ಆಗ ಸಹೋದರನ ಸಾವಿನಿಂದ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಅದಕ್ಕೆ ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಅದಕ್ಕೆ ಆ ದಿನ ಮಹಿಳೆಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ಸಹೋದರನಿಗೆ ಅಖಂಡ ಆಯುಷ್ಯ ಪ್ರಾಪ್ತವಾಗಲಿ ಮತ್ತು ಅವನು ಪ್ರತಿಯೊಂದು ದುಃಖ ಮತ್ತು ಸಂಕಟಗಳಿಂದ ಪಾರಾಗಲಿ ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ.
ನಾಗರಪಂಚಮಿಗೆ ಜಾನಪದ ಕಥೆ
ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು. ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ನಾಗರಹಾವೊಂದು ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು. ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು. ನಾನು ಯಾರನ್ನು ಅಣ್ಣ ಎಂದು ಕರೆಯಲಿ ಎಂದು ಕಣ್ಣೀರಿಟ್ಟಳು. ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು. ನಂತರ ಅಣ್ಣ – ತಂಗಿ ಇಬ್ಬರು ಸೇರಿ ನಾಗರಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಉತ್ತರ ಕರ್ನಾಟಕದಲ್ಲಿ ನಾಗರ ಪಂಚಮಿ ದೊಡ್ಡ ಹಬ್ಬ
ನಾಗರಪಂಚಮಿ ಮಾಂಗಲ್ಯಪ್ರದ ಹಾಗೂ ಸಂತಾನಪ್ರದ ಎಂಬ ನಂಬಿಕೆ. ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ವಿಶೇಷತೆಗಳಿಂದ ಕೂಡಿರುತ್ತದೆ. `ನಾಗರ ಪಂಚಮಿ ಬಂತು, ಅಣ್ಣ ಬರುತ್ತಾನೆ ಕರೆಯಾಕ, ಕರಿ ಸೀರೆ ಉಡಿಸಾಕ ಎನ್ನುವ ಜಾನಪದ ಹಾಡು ಹಬ್ಬದ ವಿಶೇಷತೆ ಸಾರುತ್ತದೆ. ತವರಿಗೆ ಹೆಣ್ಣುಮಕ್ಕಳನ್ನು ಆಹ್ವಾನಿಸಿ, ಉಡುಗೊರೆ ನೀಡಿ ಗೌರವಿಸಲಾಗುತ್ತದೆ.