ಸಿಎಂ, ಡಿಸಿಎಂ, ಗೃಹಸಚಿವರು RCB ಘಟನೆಯ ಜವಾಬ್ದಾರಿ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕು – ಬಿ.ಎಸ್. ಯಡಿಯೂರಪ್ಪ

ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ವಿಜಯೋತ್ಸವ ಆಚರಣೆಗೆ ಮುಂದಾಗಿ ಬಹುದೊಡ್ಡ ದುರಂತಕ್ಕೆ ಕಾರಣವಾಗಿರುವಾಗ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹರಿಹಾಯ್ದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕನಿಷ್ಠ ನೈತಿಕತೆ ಇದ್ದರೆ ಈ ದುರಂತ ಘಟನೆಯ ಜವಾಬ್ದಾರಿ ಹೊತ್ತು ಈ ಕೂಡಲೇ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ತಮ್ಮ ನೈತಿಕ ಜವಾಬ್ದಾರಿ ಮರೆತು, ಜನರ ಆಕ್ರೋಶವನ್ನು ತಣ್ಣಗಾಗಿಸಬಹುದೆಂಬ ದುರಾಲೋಚನೆಯಿಂದ ಪೊಲೀಸ್ ಆಯುಕ್ತರೂ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿ ಅಮಾನತು ಮಾಡಿರುವುದು ನಾಚಿಕೆಗೇಡಿನ ಕ್ರಮ. ಸಮಾರಂಭಕ್ಕೂ ಮುನ್ನವೇ ಕಾಲ್ತುಳಿತದಿಂದ ಸಾವು-ನೋವಾಗಿರುವ ಸುದ್ದಿ ತಲುಪಿದರೂ ಭಂಡತನದಿಂದ ಸನ್ಮಾನ ಕಾರ್ಯಕ್ರಮ ಮುಗಿಸಿ, ನಂತರ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ ಕಾರ್ಯಕ್ರಮ ಮುಂದುವರೆಸುವ ಮೂಲಕ ಕಾಂಗ್ರೆಸ್ ಸರ್ಕಾರ ಕರುನಾಡಿನಲ್ಲಿ ಕರಾಳ ಇತಿಹಾಸ ಸೃಷ್ಟಿಸಿದೆ ಎಂದು ಬಿಎಸ್‌ವೈ ಹೇಳಿದ್ದಾರೆ.
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು
ಪೊಲೀಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಖಂಡಿಸಿದ್ದಾರೆ. ಈ ಸಂದರ್ಭದಲ್ಲಿ ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹಸಚಿವ ಪರಮೇಶ್ವರ್ ಅವರು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರುʼ ಎಂಬಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಸರ್ಕಾರದ ನಿರ್ಲಕ್ಷ್ಯ ಹಾಗೂ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಬಹುದು ಎಂಬ ದುರಾಲೋಚನೆಯ ಕ್ರಮ ಎಂದು ಖಂಡಿಸಿದ್ದಾರೆ.