ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ವಿವಾದಾತ್ಮಕ ಹೇಳಿಕೆ- ನನ್ನ ಮಾತಲ್ಲಿ ಸತ್ಯಾಂಶವಿದೆ ಎಂದ ಡಿಕೆಶಿ
ಬೆಂಗಳೂರು: ಕುಕ್ಕರ್ ಬಾಂಬ್ ಸ್ಫೋಟದ ವಿಚಾರದಲ್ಲಿ ನೀಡಿದ ಹೇಳಿಕೆ ಸತ್ಯಾಂಶದಿಂದ ಕೂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಸತ್ಯಾಂಶವನ್ನು ಹೇಳಿದ್ದೇನೆ. ದೇಶದ ಐಕ್ಯತೆ ಹಾಗೂ ಸಮಗ್ರತೆಗಾಗಿ ನಮ್ಮ ಪಕ್ಷ ಯಾವತ್ತೂ ಬದ್ಧವಾಗಿದೆ. ನಮ್ಮ ನಾಯಕರನ್ನೇ ನಾವು ಕಳೆದುಕೊಂಡಿದ್ದೇವೆ. ಕಾಂಗ್ರೆಸ್ ಭಯೋತ್ಪಾಕದಕರ ಪರ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ಕೆಪಿಸಿಸಿ ಅಧ್ಯಕ್ಷರು, ಭ್ರಷ್ಟಾಚಾರ ವಿಚಾರ, ಓಟರ್ ಐಡಿ ವಿಚಾರ ಅದರ ಬಗ್ಗೆ ಮಾತಾಡಲಿ ನೋಡೋಣ ಎಂದು ಸವಾಲು ಹಾಕಿದರು.
ಇದನ್ನೂ ಓದಿ : ವಿಧಾನಸಭೆ ಎಲೆಕ್ಷನ್ ಮುಗಿಯುವವರೆಗೂ ಬಿಬಿಎಂಪಿಗಿಲ್ಲ ಚುನಾವಣೆ ! – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್
ಮತಪಟ್ಟಿ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್ ಮಾಡಲು ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿಸಿದೆ ಎಂದು ಡಿಕೆ ಶಿವಕುಮಾರ್ ಅವರು ಗಂಭೀರ ಆರೋಪ ಮಾಡಿದ್ದರು. ಮತ ಮಾಹಿತಿ ಕಳವು ಅಕ್ರಮ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರ ತಂದರು. ಎಲ್ಲಿಂದ ಭಯೋತ್ಪಾದಕರು ಬಂದು ಬ್ಲಾಸ್ಟ್ ಮಾಡಿದರು? ಡಿಜಿ ಆತುರದಲ್ಲಿ ಭಯೋತ್ಪಾದಕ ಕೃತ್ಯ ಎಂದರು. ಕೇವಲ ವಿಚಾರ ಬೇರೆಡೆ ಸೆಳೆಯುವ ಪ್ರಯತ್ನವಾಗಿದೆ ಎಂದು ಡಿಕೆಶಿವಕುಮಾರ್ ಅವರು ಹೇಳಿಕೆ ನೀಡಿದ್ದರು. ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆಗೂ ಮುನ್ನವೇ ಅಧಿಕಾರಿಗಳು ಇದನ್ನು ಭಯೋತ್ಪಾದಕ ಕೃತ್ಯ ಎಂದು ಹೇಗೆ ಘೋಷಿಸಿದರು? ಇದರ ಹಿಂದೆ ಯಾವ ಉಗ್ರನಿದ್ದಾನೆ? ಯಾವ ಸಂಘಟನೆ ಇದೆ? ಯಾರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ. ತನಿಖೆ ಏನಾಯ್ತು ಎಂದು ಡಿಕೆಶಿ ಪ್ರಶ್ನಿಸಿದ್ದರು.