ಚಿನ್ನಸ್ವಾಮಿಯಲ್ಲಿ ಕಾಲ್ತುಳಿತ ಪ್ರಕರಣ – ಮೃತಪಟ್ಟವರ ಕುಟುಂಬಗಳಿಗೆ ತಲಾ ₹ 25 ಲಕ್ಷ ಪರಿಹಾರ ನೀಡಿದ ಆರ್ಸಿಬಿ ಫ್ರಾಂಚೈಸಿ!

2025ರ ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ಚೊಚ್ಚಲ ಕಪ್ ಗೆದ್ದುಕೊಂಡಿದೆ. 18 ವರ್ಷಗಳ ಬಳಿಕ ಆರ್ಸಿಬಿ ಕಪ್ ಗೆಲ್ತಿದ್ದಂತೆ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಆದ್ರೆ ಆ ಸಂಭ್ರಮಾಚರಣೆ 18 ಗಂಟೆಯೂ ಉಳಿಯಲಿಲ್ಲ. ಜೂನ್ 4, 2025 ರಂದು ಬೆಂಗಳೂರಿನಲ್ಲಿ ನಡೆದ RCB ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿದ್ದರು. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಸಹಾಯಹಸ್ತ ಚಾಚಿದೆ.
ಇದನ್ನೂ ಓದಿ: ಉತ್ತರಾಖಂಡದಲ್ಲಿ ವರುಣನ ರುದ್ರನರ್ತನ! – 6 ಜನ ಸಾವು, 10ಕ್ಕೂ ಹೆಚ್ಚು ಮಂದಿ ನಾಪತ್ತೆ!
ಹೌದು, ಜೂನ್ 4 ಆರ್ಸಿಬಿ ಪಾಲಿಗೆ ಕರಾಳ ದಿನ. ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿದ್ದು, 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಅಭಿಮಾನಿಗಳ ಸಾವಿನ ಬೆನ್ನಲ್ಲೇ ಆರ್ಸಿಬಿ ಕೇರ್ಸ್ ಶುರು ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇದೀಗ ಮೃತಪಟ್ಟವರ ಕುಟುಂಬಗಳಿಗೆ ಧನ ಸಹಾಯ ನೀಡಿದೆ. ಅಲ್ಲದೆ ಆರ್ಸಿಬಿ ಕೇರ್ಸ್ ಮೂಲಕ ಮತ್ತಷ್ಟು ಸಹಾಯಹಸ್ತ ನೀಡುವ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುವ ಭರವಸೆಯನ್ನು ಸಹ ನೀಡಿದೆ. ಇದೀಗ ಸಂಭ್ರಮಾಚರಣೆ ವೇಳೆ ಮೃತಪಟ್ಟ ಪ್ರತಿ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಿರುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅಧಿಕೃತವಾಗಿ ಪ್ರಕಟಿಸಿದೆ. ಈ ನೆರವಿನ ಮೂಲಕ ಆರ್ಸಿಬಿ ಹೊಸ ಅಧ್ಯಾಯವನ್ನು ಸಹ ಶುರು ಮಾಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆರ್ಸಿಬಿ ಫ್ರಾಂಚೈಸಿ ಪೋಸ್ಟ್ ಶೇರ್ ಮಾಡಿದೆ.
RCB ಪೋಸ್ಟ್ ನಲ್ಲಿ ಏನಿದೆ?
ಜನವರಿ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ.
ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ.. ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ.
ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್ಸಿಬಿ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ. ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ.
ಇದು ಆರ್ಸಿಬಿ ಕೇರ್ಸ್ನ ಆರಂಭವೂ ಹೌದು. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆಯಾಗಿದೆ.
ಆರ್ಸಿಬಿ ಕೇರ್ಸ್ ಕುರಿತು ಇನ್ನಷ್ಟು ವಿವರಗಳು ಶೀಘ್ರದಲ್ಲೇ.. ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ.

ನೋಡಿರಿ

