ಹಾಸನ ಗಣೇಶ ಮೆರವಣಿಗೆ ದುರಂತಕ್ಕೆ 9 ಬಲಿ – ಮೋದಿ ಸಂತಾಪ , 2 ಲಕ್ಷ ಪರಿಹಾರ

ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ನಡೆದಿದೆ. ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ಗಣೇಶ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಇನ್ನೂ 17ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಹೇಳಿದ್ದಾರೆ. ಇನ್ನು ಮೃತರ ಪೈಕಿ ಬಹುತೇಕರು ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ತಮ್ಮ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಭೀಕರ ಟ್ರಕ್ ಅಪಘಾತ ಘಟನೆಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಎಕ್ಸ್ ಪೋಸ್ಟ್‌ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಅಲ್ಲದೇ ಅಪಘಾತದಲ್ಲಿ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: ನೇಪಾಳದ ಪ್ರಗತಿಗೆ ಭಾರತ ಸಿದ್ಧ – ಪ್ರಧಾನಿ ಸುಶೀಲಾ ಕರ್ಕಿಗೆ ಮೋದಿ ಅಭಿನಂದನೆ
“ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕವಾಗಿದೆ. ಈ ದು:ಖದ ಸಮಯದಲ್ಲಿ ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ನಾನು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಟ್ರಕ್ ಡಿಕ್ಕಿ ದುರಂತಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ಟ್ವಿಟ್ ಮಾಡಿ ಹೇಳಿದ್ದಾರೆ.

ನೋಡಿರಿ

