ಸೋಲಿನ ಶತಕದೆಡೆಗೆ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿ ಅವರಿಗೆ ಅಭಿನಂದನೆ – ಆರ್.ಅಶೋಕ್ ಟಾಂಗ್

ಸೋಲಿನ ಶತಕದೆಡೆಗೆ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿ ಅವರಿಗೆ ಅಭಿನಂದನೆ – ಆರ್.ಅಶೋಕ್ ಟಾಂಗ್

ಬಿಹಾರ ಚುನಾವಣೆ ಫಲಿತಾಂಶದಲ್ಲಿ  ಎನ್‌ಡಿಎ ಭರ್ಜರಿ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ವಿವಿಧೆಡೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಪ್ರತಿಕ್ರಿಯಿಸಿ, ಸೋಲಿನ ಶತಕದೆಡೆಗೆ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು. ಆಕಾಶದಲ್ಲಿರುವ ನಕ್ಷತ್ರಗಳನ್ನು ಎಣಿಸಿಬಿಡಬಹುದೇನೋ ಆದರೆ ರಾಹುಲ್‌ ಗಾಂಧಿ  ಅವರು ಕಾಂಗ್ರೆಸ್ ಪಕ್ಷವನ್ನ ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೆ ಎನ್ನುವುದನ್ನು ಲೆಕ್ಕ ಮಾಡುವುದು ಕಷ್ಟ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಬಿಹಾರಲ್ಲಿ ಎನ್‌ಡಿಎಗೆ ಗೆಲುವಿನ ಹಾರ – ಸಂಜೆ 7ಕ್ಕೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಮೋದಿ ಭೇಟಿ

ಸುಶಾಸನ, ಭ್ರಷ್ಟಾಚಾರ ಮುಕ್ತ ಆಡಳಿತ, ಅಭಿವೃದ್ಧಿ ರಾಜಕಾರಣದಿಂದಾಗಿ ಜನಮನ್ನಣೆ ಗಳಿಸಿರುವ ನಿತೀಶ್ ಕುಮಾರ್ ಅವರ ನೇತೃತ್ವದ ಎನ್‌ಡಿಎ ಸರ್ಕಾರದ ಮುಂದೆ ಜಂಗಲ್ ರಾಜ್ ಕುಖ್ಯಾತಿಯ ಆರ್‌ಜೆಡಿ – ಕಾಂಗ್ರೆಸ್ ಮಹಾಘಟಬಂಧನ ಗೆಲ್ಲಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಪಕ್ಕಕ್ಕೆ ಚೆನ್ನಾಗಿ ಗೊತ್ತಿತ್ತು. ಆದ್ದರಿಂದಲೇ ರಾಹುಲ್ ಗಾಂಧಿ ಅವರು ಮುಖಭಂಗ ತಪ್ಪಿಸಿಕೊಳ್ಳಲು ವೋಟ್ ಚೋರಿ ಎಂಬ ಕಟ್ಟುಕಥೆ ಮೂಲಕ ಜನರನ್ನ ದಿಕ್ಕು ತಪ್ಪಿಸಲು ಹೊರಟರು ಎಂದು ಕಿಡಿಕಾರಿದ್ದಾರೆ.

ಬಿಹಾರದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರ ʼವೋಟ್ ಚೋರಿʼ ಪ್ರಹಸನವನ್ನು ಸಾರಾಸಗಟಾಗಿ ತಿರಸ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನಿತೀಶ್ ಕುಮಾರ್ ಅವರ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಮತ್ತೊಮ್ಮೆ ಸ್ಪಷ್ಟ ಜನಾದೇಶ ನೀಡಿದ್ದಾರೆ. ಹರಿಯಾಣ, ಮಹಾರಾಷ್ಟ್ರ, ಬಿಹಾರದಲ್ಲಿ ಬಂದಿರುವ ಸ್ಥಿತಿಯೇ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲೂ ಬರುವ ದಿನ ಬಹಳ ದೂರವಿಲ್ಲ. ಈಗಾಗಲೇ ಜನಮನ್ನಣೆ ಕಳೆದುಕೊಂಡಿರುವ ಕಾಂಗ್ರೆಸ್‌ ಪಕ್ಷ, ಕರ್ನಾಟಕದಲ್ಲೂ ಧೂಳೀಪಟ ಆಗುವುದು ನೂರಕ್ಕೆ ನೂರು ಗ್ಯಾರಂಟಿ. ಎನ್‌ಡಿಎ ಗೆಲುವಿಗೆ ಕಾರಣೀಭೂತರಾದ ಬಿಹಾರ ಬಿಜೆಪಿ, ಜೆಡಿಯು ಸೇರಿದಂತೆ ಮೈತ್ರಿಕೂಟದ ಎಲ್ಲ ನಾಯಕರು, ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Kishor KV