ಚಳಿಗಾಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಂತಾಪ – ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ವಸ್ತು ಸಂಗ್ರಹಾಲಯ ನಿರ್ಮಾಣಕ್ಕೆ ತೀರ್ಮಾನ

ಚಳಿಗಾಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಂತಾಪ – ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ವಸ್ತು ಸಂಗ್ರಹಾಲಯ ನಿರ್ಮಾಣಕ್ಕೆ ತೀರ್ಮಾನ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶ ಆರಂಭವಾಗಿದೆ. ಡಿಸೆಂಬರ್ 19 ರವರೆಗೆ ಈ ಅಧಿವೇಶನ ನಡೆಯಲಿದ್ದು, ಕಲಾಪ ಆರಂಭದ ಮೊದಲ ದಿನದ ಮೊದಲಾರ್ಧದಲ್ಲಿ, ಈ ಹಿಂದಿನ ಅವಧಿಯಲ್ಲಿ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ಇದನ್ನೂ ಓದಿ: 7ನೇ ದಿನವೂ ರೆಕ್ಕೆ ಬಿಚ್ಚದೆ ಕುಳಿತ ಇಂಡಿಗೋ! – ವಿಮಾನ ಹಾರಾಟಕ್ಕೆ ಇನ್ನೆಷ್ಟು ಸಮಯ ಬೇಕು?

ಸೋಮವಾರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ಕನ್ನಡದ ಸಾಹಿತಿ ಎಸ್‌ಎಲ್‌ ಬೈರಪ್ಪ, ಮಾಜಿ ಸಚಿವ ಎಚ್ ವೈ ಮೇಟಿ, ಕಾಂಗ್ರೆಸ್‌ ಮಾಜಿ ಸಚಿವ ಆರ್‌ ವಿ ದೇವರಾಜು ಸೇರಿದಂತೆ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಇದೇ ವೇಳೆ ಸಂತಾಪ ಸೂಚಿಸಿದ ಸಿಎಂ ಸಿದ್ಧರಾಮಯ್ಯ, ಬೇಲೂರಿನಲ್ಲಿ ಸಾಲುಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಅಲ್ಲದೇ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ ನೀಡಲು ಕೂಡ ತೀರ್ಮಾನ ಮಾಡಿದ್ದೇವೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಅಧಿವೇಶನದಲ್ಲಿ ಬುಧವಾರ ಮತ್ತು ಗುರುವಾರ ಪೂರ್ತಿ ದಿನದ ಕಲಾಪವನ್ನು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದ್ದಾರೆ.

ಇನ್ನು ವಿಧಾನಸಭೆ ಚಳಿಗಾಲದ ಅಧಿವೇಶನ ಸಮಯದಲ್ಲಿ ಮಹಾರಾಷ್ಟ್ರದ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ಪುನಃ ಪುಂಡಾಟಿಕೆಗೆ ಮುಂದಾಗಿದ್ದು ಗಡಿಭಾಗದಲ್ಲಿ ಉದ್ವಿಗ್ನತೆ ಹೆಚ್ಚಿಸಿದೆ. ಕೊಲ್ಲಾಪುರದಲ್ಲಿ ಶಿವಸೇನೆ ಪುಂಡರು ರಸ್ತೆಗಿಳಿದು ಕರ್ನಾಟಕ ಸಾರಿಗೆ ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೊಲ್ಲಾಪುರ ಸೆಂಟ್ರಲ್ ಬಸ್ ಸ್ಟ್ಯಾಂಡ್‌ನಲ್ಲಿ ಶಿವಸೇನೆ ಕಾರ್ಯಕರ್ತರು ಉದ್ಧಟತನಕ್ಕೆ ತೊಡಗಿದ್ದು, ಠಾಕ್ರೆ ಬಣದ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ ದೇವಣೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಈ ನಡುವೆ ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಕ್ಕೆ ಸಂಬಂಧಿಸಿದ ಉದ್ವಿಗ್ನತೆ ಹೆಚ್ಚಿದ್ದು, ಎಂಇಎಸ್ ಮುಖಂಡ ಮಾಳೋಜಿ ಅಷ್ಟೇಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಯಾಕ್ಸಿಡಿಪೋದ ಮೈದಾನಕ್ಕೆ ಆಗಮಿಸುತ್ತಿದ್ದಂತೆಯೇ ಮಾಜಿ ಮೇಯರ್ ಅಷ್ಟೇಕರ್ ಅವರನ್ನು ವಶಕ್ಕೆ ಪಡೆಯಲಾಗಿದೆ.

Shwetha M