ರೈತ ವಿರೋಧಿ ನೀತಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ – 50ಕ್ಕೂ ಹೆಚ್ಚು ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ!

ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಇವೆಲ್ಲದ್ರ ಮಧ್ಯೆ ರಾಜ್ಯ ಬಿಜೆಪಿ ನಾಯಕರು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಬೆಳಗಾವಿಯಲ್ಲಿ ರೈತರೊಂದಿಗೆ ಪ್ರತಿಭಟನೆ ನಡೆಸಿದೆ. ಈ ವೇಳೆ ಪೊಲೀಸರು 50ಕ್ಕೂ ಹೆಚ್ಚು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಹಬೆಯಾಡುವ ಬಾತ್ ಟಬ್.. ರಕ್ತಸಿಕ್ತ ದೇಹ.. ಯಶ್ ರಗಡ್ ಲುಕ್! – ರಾಕಿಬಾಯ್ ಹೊಸ ಲುಕ್ ರಿವೀಲ್
ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬೆಳಗಾವಿಯಲ್ಲಿ ಬಿಜೆಪಿ ನಾಯಕರಾದ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವಾರು ಶಾಸಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ನಾಯಕರು ರೈತರೊಂದಿಗೆ ಸುವರ್ಣ ಸೌಧ ಮುತ್ತಿಗೆಗೆ ಯತ್ನಿಸಿದ್ದಾರೆ. ಹಲಗಾ ಗ್ರಾಮದ ಬಳಿ ಬಿಜೆಪಿ ನಾಯಕರು ಬರುತ್ತಿದ್ದಂತೆ ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ತಳ್ಳಾಟ, ನೂಕಾಟ ನಡೆದಿದೆ. ಪರಿಸ್ಥಿತಿ ಬಿಗುಡಾಯಿಸುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಿಟಿ ರವಿ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದೇ ವೇಳೆ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ರೈತರ ಆತ್ಮಹತ್ಯೆಯಲ್ಲಿ ದೇಶದಲ್ಲೇ ಕರ್ನಾಟಕ 2ನೇ ಸ್ಥಾನದಲ್ಲಿದೆ. ಬೆಳಗಾವಿಯಲ್ಲಿ ಕಾಟಾಚಾರಕ್ಕೆ ಅಧಿವೇಶನ ನಡೆಯುತ್ತಿದೆ. ಕಾಂಗ್ರೆಸ್ಸಿಗರಿಗೆ ರೈತರ ಬಗ್ಗೆ ಮಾತನಾಡಲು ಯೋಗ್ಯತೆ ಇದೆಯಾ? ಬೊಮ್ಮಾಯಿ ವಿದ್ಯಾನಿಧಿ ಜಾರಿ ಮಾಡಿದರು. ಅದಕ್ಕೂ ಹಣ ಕೊಡಲ್ಲ. ಪ್ರವಾಹ ಬರಗಾಲ ಬಂದಾಗ ಒಂದೇ ತಿಂಗಳಲ್ಲಿ ಪರಿಹಾರ ಕೊಡ್ತಿದ್ದೆವು. ಕಾಂಗ್ರೆಸ್ ಸರ್ಕಾರ 6 ತಿಂಗಳಾದ್ರೂ ಪರಿಹಾರ ಕೊಟ್ಟಿಲ್ಲ. ಯಾವ ಮುಖ ಇಟ್ಟುಕೊಂಡು ಕೇಂದ್ರದ ಬಳಿ ಪರಿಹಾರ ಕೇಳುತ್ತೀರಾ? ರಾಜ್ಯ ಸರ್ಕಾರ ದಲಿತರಿಗೆ ಮೀಸಲಿಟ್ಟಿದ್ದ ಹಣ ಬಳಕೆ ಮಾಡಿಕೊಳ್ಳುತ್ತಿದೆ. ಇದರ ಬಗ್ಗೆ ಒಬ್ಬ ದಲಿತ ನಾಯಕ ಕೂಡ ಮಾತನಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ಉತ್ತರ ಕರ್ನಾಟಕದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ರೈತರ ಸಮಸ್ಯೆಗಳನ್ನು ಪರಿಹರಿಸಬೇಕು. ಮೆಕ್ಕೆಜೋಳ ಮತ್ತು ಕಬ್ಬು ಬೆಳೆಗಾರರ ಕಳವಳಗಳನ್ನು ಪರಿಹರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ಮೆಕ್ಕೆಜೋಳ ರೈತರು ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ಸರ್ಕಾರ ಇನ್ನೂ ಕಾರ್ಯಪ್ರವೃತ್ತವಾಗಿಲ್ಲ. ರೈತರು ತಮ್ಮ ಉತ್ಪನ್ನಗಳನ್ನು ಮಧ್ಯವರ್ತಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ನೋಡಿರಿ

