ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಾ? ಇಲ್ವಾ? – ಕೆಎಸ್ಸಿಎ ಮತ್ತು ಗೃಹ ಸಚಿವರ ಸಭೆಯಲ್ಲಿ ಆಗಿದ್ದೇನು?

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸಬಹುದೇ ಅಥವಾ ಬೇಡವೇ ಎಂಬ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಬೆಂಗಳೂರು ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವಿಧಾನಸೌಧದಲ್ಲಿ ಕೆಎಸ್ಸಿಎ ಪದಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಸೋಮವಾರ ಸಭೆ ನಡೆಸಿದ್ದು, ಈ ವೇಳೆ ಸಮಿತಿ ರಚಿಸಲಾಗಿದೆ. ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಡಿ.24ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್ಸಿಎ ಕೋರಿದೆ. ಪ್ರೇಕ್ಷಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್ಸಿಎ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪರಿಶೀಲಿಸಲು ಬೆಂಗಳೂರು ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಚಾಮರಾಜನಗರದಲ್ಲಿ ಹುಲಿ ಕಾಟ – ಎರಡು ದಿನ ಶಾಲೆ, ಅಂಗಡಿ, ಜನರ ಓಡಾಟ ಬಂದ್
ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಜಿಬಿಎ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳಿರುವ ಸಮಿತಿ ರಚಿಸಲಾಗಿದ್ದು, ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಸಮಿತಿ ನೀಡುವ ವರದಿ ಆಧರಿಸಿ, ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರು 17 ಅಂಶಗಳ ಸಲಹೆ ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿರುತ್ತದೆ ಎಂದು ಸೂಚಿಸಿ ಪತ್ರ ಬರೆದಿದ್ದರು. ಅದರಲ್ಲಿ ಏನೆಲ್ಲ ಪೂರ್ಣಗೊಳಿಸಿದ್ದಾರೆ ಎಂಬುದನ್ನು ಪರಿಶೀಲಿಸಿ, ಇಂದು ಸಂಜೆ 5 ಗಂಟೆಯೊಳಗೆ ಸಮಿತಿಯು ಸರ್ಕಾರಕ್ಕೆ ವರದಿ ನೀಡಲಿದೆ ಎಂದು ತಿಳಿಸಿದರು.

ನೋಡಿರಿ

