ಕರ್ನಾಟಕದಲ್ಲಿ ಬಂಗಾಳ ಕೊಲ್ಲಿ ವಾಯುಭಾರ ಕುಸಿತದ ಎಫೆಕ್ಟ್ – ಚಳಿ ಜೊತೆ ಈ ಪ್ರದೇಶಗಳಲ್ಲಿ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಎಫೆಕ್ಟ್ ಕರ್ನಾಟಕಕ್ಕೆ ತಟ್ಟಿದೆ. ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶೀತಗಾಳಿ ಹಾಗೂ ಮೋಡ ಕವಿದ ವಾತಾವರಣವಿದ್ದು, ತಾಪಮಾನ ಕನಿಷ್ಠಕ್ಕೆ ಕುಸಿತವಾಗುತ್ತಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೈ ಕೊರೆಯುವ ಚಳಿ ಇರಲಿದ್ದು, ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಭಾರೀ ಚಳಿ ದಾಖಲಾಗಿದೆ. ರಾಜ್ಯದ ಬಯಲು ಪ್ರದೇಶಗಳಲ್ಲಿ ಅತಿ ಕನಿಷ್ಠ ತಾಪಮಾನ 11.6 ಡಿಗ್ರಿ ಸೆಲ್ಸಿಯಸ್ ಧಾರವಾಡ, ಗದಗ ಹಾಗೂ ಬೀದರ್ನಲ್ಲಿ ದಾಖಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಇರುವುದರಿಂದ ನಾಳೆಯಿಂದ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 5 ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಕ್ರಮೇಣ ಇಳಿಕೆ ಆಗಲಿದೆ. ಇನ್ನು ಕರ್ನಾಟಕದ ಕರಾವಳಿ ಪ್ರದೇಶ ಹಾಗೂ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಮಹತ್ವದ ಬದಲಾವಣೆಗಳು ಇರುವುದಿಲ್ಲ ಎಂದು ಹೇಳಲಾಗಿದೆ.
ಇದನ್ನೂ ಓದಿ: ಗೀಳಿಡದ ಗಿಲ್ Vs ಪ್ರಚಂಡ ಪಡಿಕ್ಕಲ್ – ವಿಜಯ್ ಹಜಾರೆಯಲ್ಲೂ PRINCE ಫೇಲ್
ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಇನ್ನೊಂದು ವಾರ ಚಳಿ ವಾತಾವರಣ ಮುಂದುವರಿಯಲಿದೆ. ಜನವರಿ 08 ರಿಂದ ಅಲ್ಲಲ್ಲಿ ಚದುರಿದಂತೆ ಮಳೆ ಆಗಲಿದೆ. ಜನವರಿ 09 ಹಾಗೂ ಜನವರಿ 10 ರಂದು ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಆಗಲಿದೆ. ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಅಲ್ಲದೇ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಉತ್ತರ (ಬೆಂಗಳೂರು ಗ್ರಾಮಾಂತರ), ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಮಳೆ ಆರ್ಭಟ ಇರಲಿದೆ. ಉಳಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಐಎಂಡಿ ವರದಿ ತಿಳಿಸಿದೆ.
ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿಮೀ ವರೆಗೆ ವಿಸ್ತರಿಸಿದೆ. ಮುಂದಿನ 24ಗಂಟೆಗಳಲ್ಲಿ ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಮತ್ತು ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ. ಅದರ ನಂತರ, ಮುಂದಿನ 48 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ನೋಡಿರಿ

