ಮಲೆಯಾಳಿ ಭಾಷಾ ಮಸೂದೆ-2025 ಮಂಡಿಸಲು ಕೇರಳ ಸರ್ಕಸ್ – ಕನ್ನಡಿಗರ ಮೇಲೆ ಬಿಗ್ ಎಫೆಕ್ಟ್

ಕೇರಳ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ರೀತಿ ಇರುವಾಗ ಕೇರಳಿಗರನ್ನು ಮೆಚ್ಚಿಸಲು ಕೇರಳ ಸರ್ಕಾರ ಸರ್ಕಸ್ ಮಾಡುತ್ತಿದೆ. ಮಲೆಯಾಳಿ ಭಾಷಾ ಮಸೂದೆ-2025 ಮಂಡಿಸಲು ಮುಂದಾಗಿದೆ. ಈ ಪ್ರಸ್ತಾವನೆಗೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವುದು ಈ ಮಸೂದೆಯ ಉದ್ದೇಶವಾಗಿದೆ. ಈ ಮಸೂದೆಗೆ ಕನ್ನಡಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗಡಿನಾಡ ಕನ್ನಡಿಗರ ಮೇಲೆ ಇದು ಪರಿಣಾಮ ಬೀರಲಿದೆ. ಇದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಕ್ಲಾಸ್ ರೂಂನಲ್ಲೇ ಲೆಕ್ಚರರ್ ಅವಮಾನ – ಮನನೊಂದ ವಿದ್ಯಾರ್ಥಿನಿ ಸೂ*ಸೈಡ್ , ನಿಜಕ್ಕೂ ಆಗಿದ್ದೇನು?
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾಧಿಸುತ್ತೇನೆ ಎಂದಿದ್ದಾರೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ. ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ.
ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ. ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ-2025 ಅನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರನ್ನು ಆಗ್ರಹಿಸುತ್ತೇನೆ.

ನೋಡಿರಿ

