ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಬೇಟೆ – 200ಕ್ಕೂ ಹೆಚ್ಚು ಅಕ್ರಮ ವಲಸಿಗರಿಗೆ ಗೇಟ್‌ಪಾಸ್

ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ವಿಶೇಷ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ನಗರದ 11 ಡಿಸಿಪಿ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ. ಕಳೆದ ಒಂದು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗುತ್ತಿದೆ.
ಪೊಲೀಸರು ಹೇಳುವಂತೆ ನಗರದಲ್ಲಿ ಒಟ್ಟು 200ಕ್ಕೂ ಅಧಿಕ ಅಕ್ರಮ ವಲಸಿಗರನ್ನು ಗುರುತಿಸಲಾಗಿದ್ದು, ನಿನ್ನೆ ಒಂದೇ ದಿನದಲ್ಲಿ 100ಕ್ಕೂ ಹೆಚ್ಚು ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗಿದೆ. ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ತಂಗಿದ್ದ ಈ ವಲಸಿಗರು ಅಗತ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಹೆಚ್ಚಿನವರು ಬಾಂಗ್ಲಾದೇಶ ಮೂಲದವರಾಗಿದ್ದು, ಆಫ್ರಿಕಾ ಸೇರಿದಂತೆ ಇನ್ನೂ ಕೆಲವು ದೇಶಗಳಿಂದ ಬಂದವರೂ ಪತ್ತೆಯಾಗಿದ್ದಾರೆ.
ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್! – ಇನ್ಮುಂದೆ ಈ ಮಾರ್ಗದಲ್ಲಿ ಪ್ರಯಾಣ ಮತ್ತಷ್ಟು ಸುಲಭ!
ಪತ್ತೆಯಾದ ಅಕ್ರಮ ವಲಸಿಗರನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (FRRO) ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಕಾರ್ಯಾಚರಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ FRRO ಅಧಿಕಾರಿಗಳು ಪೊಲೀಸರಿಗೆ ಸಹಕಾರ ನೀಡುತ್ತಿದ್ದಾರೆ.
ಪೊಲೀಸರು ನಡೆಸಿದ ಪರಿಶೀಲನೆ ವೇಳೆ ಕೆಲವರ ಬಳಿ ಆಧಾರ್ ಕಾರ್ಡ್ ಸೇರಿದಂತೆ ಸ್ಥಳೀಯ ದಾಖಲೆಗಳು ಕೂಡ ಪತ್ತೆಯಾಗಿವೆ. ಅವುಗಳ ನೈಜತೆ ಕುರಿತು ಪರಿಶೀಲನೆ ನಡೆಯುತ್ತಿದೆ. ಪತ್ತೆಯಾದ ವಿದೇಶಿ ಪ್ರಜೆಗಳ ವಿವರಗಳನ್ನು ಸಂಬಂಧಿತ ದೇಶಗಳ ಅಧಿಕಾರಿಗಳಿಗೆ ರವಾನಿಸಲಾಗುತ್ತಿದ್ದು, ಅವರ ಗುರುತು ಮತ್ತು ದಾಖಲೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ನೋಡಿರಿ

