ನಾಳೆಯಿಂದ ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮುಷ್ಕರ – ರೋಗಿಗಳಿಗೆ ಸಂಕಷ್ಟ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ನಾಳೆಯಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನಿಸಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಜ್ವರ, ಕೆಮ್ಮು, ಚರ್ಮ ಸಂಬಂಧಿತ ಸಮಸ್ಯೆಗಳು, ಸ್ಕ್ಯಾನಿಂಗ್ ಅಥವಾ ರಕ್ತ ಪರೀಕ್ಷೆ ಸೇರಿದಂತೆ ಸಾಮಾನ್ಯ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿತರಾಗಿರುವ ರೋಗಿಗಳಿಗೆ ಇದು ದೊಡ್ಡ ತೊಂದರೆಯಾಗುವ ಆತಂಕ ವ್ಯಕ್ತವಾಗಿದೆ. ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸುತ್ತಿರುವುದರಿಂದ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಲವ್ ಮಾಕ್ಟೇಲ್ ಸಿನಿಮಾದಿಂದ ನನಗೆ ಫೇಮ್ ಅಲ್ಲ, ಶೇಮ್ ಸಿಕ್ಕಿತು! – ಬ್ರಹ್ಮಗಂಟು ನಟಿ ಗೀತಾ ಭಾರತಿ ಭಟ್!
ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ಹಲವು ವರ್ಷಗಳಿಂದ ಬಾಕಿಯಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯಲು ಈ ಮುಷ್ಕರಕ್ಕೆ ಕರೆ ನೀಡಿದೆ. ಕಳೆದ ನಾಲ್ಕು ವರ್ಷಗಳಿಂದ ನಡೆಯದಿರುವ ವೃಂದ ಮತ್ತು ನೇಮಕಾತಿ ಪ್ರಕ್ರಿಯೆ, 13 ವರ್ಷಗಳಿಂದ ಪರಿಷ್ಕರಣೆಗೊಳ್ಳದ ವೈದ್ಯರ ಜ್ಯೇಷ್ಠತಾ ಪಟ್ಟಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಸೇರಿದಂತೆ ಒಟ್ಟು 15 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘವು ಹೋರಾಟಕ್ಕೆ ಮುಂದಾಗಿದೆ.
ವೈದ್ಯರ ಬೇಡಿಕೆಗಳನ್ನು ಚರ್ಚಿಸಲು ಆರೋಗ್ಯ ಇಲಾಖೆ ಇದುವರೆಗೆ ಏಳು ಸಭೆಗಳನ್ನು ನಡೆಸಿದೆ. ಮಾರ್ಚ್ 2ರಂದು ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯೂ ಫಲಪ್ರದವಾಗಲಿಲ್ಲ. ಸರ್ಕಾರದಿಂದ ಯಾವುದೇ ಲಿಖಿತ ಭರವಸೆ ಸಿಗದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮುಂದಾಗಬೇಕಾಯಿತು ಎಂದು ಸಂಘದ ನಾಯಕರು ತಿಳಿಸಿದ್ದಾರೆ.

ನೋಡಿರಿ

