ಬ್ರೇಕ್‌ಫಾಸ್ಟ್ ಮೀಟಿಂಗ್ ಆಯ್ತು.. ಈಗ ಡಿನ್ನರ್ ಮೀಟಿಂಗ್! – ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ!

ಬ್ರೇಕ್‌ಫಾಸ್ಟ್ ಪಾಲಿಟಿಕ್ಸ್ ಬಳಿಕ ಈಗ ಡಿನ್ನರ್ ಪಾಲಿಟಿಕ್ಸ್ ರಾಜ್ಯದಲ್ಲಿ ಸದ್ದು ಮಾಡ್ತಿದೆ. ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಡಿನ್ನರ್ ಮೀಟಿಂಗ್ ಆಯೋಜಿಸಿದ್ರು. ಇದೀಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ.
ಇದನ್ನೂ ಓದಿ: ಅಂದು ಪುಟ್ಟಕ್ಕನ ಮಕ್ಕಳು, ಇಂದು ಗಂಧದ ಗುಡಿ – ಅರ್ಧದಲ್ಲೇ ಕೈಕೊಟ್ಟ ಕಿರುತೆರೆ ನಟಿ ಸಂಜನಾ ಬುರ್ಲಿ
ಡಿಸಿಎಂ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಂಡ ನೆಪದಲ್ಲಿ ಡಿನ್ನರ್ ಮೀಟಿಂಗ್ ಆಯೋಜಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಕೂಡ ಮಾರ್ಚ್ 16ರಂದು ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ. ಇದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿರುವುದು ಗಮನಾರ್ಹವಾಗಿದೆ.
ಈ ಸಭೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಸಂಪುಟ ಪುನರ್‌ರಚನೆಗಾಗಿ ಒತ್ತಡ ಹೇರುವ ತಂತ್ರಗಾರಿಕೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ಬೆಳವಣಿಗೆಗಳ ನಡುವೆಯೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಡಿನ್ನರ್ ಕೂಟ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ವಿವಿಧ ರೀತಿಯ ಚರ್ಚೆಗೆ ಗ್ರಾಸವಾಗಿದೆ.
ಈ ಡಿನ್ನರ್ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶೀಘ್ರದಲ್ಲೇ ಘೋಷಣೆಯಾಗಬಹುದಾದ ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಗಳಲ್ಲಿ ಯಾರು ಭಾಗವಹಿಸಬೇಕು ಎಂಬುದರ ಕುರಿತಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ನೋಡಿರಿ

