ಆರಂಭಿಕ ಆಟಗಾರರ ಆಕರ್ಷಕ ಶತಕ – ರೋಹಿತ್ ಶರ್ಮಾ, ಗಿಲ್ ಭರ್ಜರಿ ಸೆಂಚುರಿ
ಟೀಮ್ ಇಂಡಿಯಾದ ಆರಂಭಿಕ ಆಟಗಾರರಿಬ್ಬರು ಆಕರ್ಷಕ ಶತಕ ಸಿಡಿಸಿದ್ದಾರೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ. ಬರೋಬ್ಬರಿ ಮೂರು ವರ್ಷಗಳ ನಂತರ ಟೀಮ್ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ ನಲ್ಲಿ ಸೆಂಚುರಿ ಬಾರಿಸಿದ್ದಾರೆ. 85 ಎಸೆತದಲ್ಲಿ 6 ಸಿಕ್ಸ್ ಹಾಗೂ 9 ಫೋರ್ ಗಳ ಮೂಲಕ 101 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.
ಇದನ್ನೂ ಓದಿ: ‘ರಿಷಬ್ ಪಂತ್ ಬೇಗ ಗುಣಮುಖರಾಗಲಿ’ – ಮಹಾಕಾಳೇಶ್ವರನ ಮೊರೆ ಹೋದ ಟೀಮ್ ಇಂಡಿಯಾ ಆಟಗಾರರು
ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಮತ್ತೊಂದು ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಕಳೆದ 9 ದಿನಗಳಲ್ಲಿ ಗಿಲ್ ಅವರ ಮೂರನೇ ದೊಡ್ಡ ಇನ್ನಿಂಗ್ಸ್ ಇದಾಗಿದೆ. ಇದಕ್ಕೂ ಮೊದಲು ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 208 ರನ್ ಗಳಿಸಿದ್ದ ಗಿಲ್, ಅದಕ್ಕೂ ಮೊದಲು ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 116 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದರು. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಕಣಕ್ಕಿಳಿದ ಗಿಲ್, 78 ಎಸೆತದಲ್ಲಿ 13 ಫೋರ್ ಮತ್ತು 5 ಸಿಕ್ಸ್ ಗಳ ಮೂಲಕ 112 ರನ್ ಗಳಿಸಿ ಔಟಾಗಿದ್ದಾರೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಇಂದೋರ್ ನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಕಿವೀಸ್ ನಾಯಕ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಸರಣಿಯ ಮೊದಲ ಪಂದ್ಯವನ್ನು ಭಾರತ 12 ರನ್‌ಗಳಿಂದ ಗೆದ್ದುಕೊಂಡಿತ್ತು. ಹಾಗೂ ಎರಡನೇ ಏಕದಿನ ಪಂದ್ಯದಲ್ಲಿ 8 ವಿಕೆಟ್‌ಗಳ ಜಯ ಸಾಧಿಸಿತ್ತು. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತಕ್ಕೆ ಇಂದಿನ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ, ಏಕದಿನದಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಲಿದೆ.