ಯೋಗೇಶ್ ಗೌಡ ಹತ್ಯೆ ಕೇಸ್! – ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕೊಲೆ ಪ್ರಕರಣದ ಅಪರಾಧಿಗಳಿಗೆ ಈಗ ಶಿಕ್ಷೆ ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಇದನ್ನೂ ಓದಿ: ಮದುವೆ ಮನೆಯಲ್ಲಿ ರಸಗುಲ್ಲಾ ತಿಂದಿದ್ದಕ್ಕೆ ಬಾಲಕನನ್ನು ತಂದೂರಿ ಬಟ್ಟಿಗೆ ಎಸೆದ ಕ್ರೂರಿ!
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು. ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ಒಪ್ಪಿಸಿತ್ತು. ಇಂಚಿಂಚು ತನಿಖೆ ನಡೆಸಿದ್ದ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿತ್ತು. ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿಯನ್ನ ಕೋರ್ಟ್ ಖುಲಾಸೆಗೊಳಿತ್ತು. ಇನ್ನು ಇಬ್ಬರು ನಿರ್ದೋಷಿಗಳನ್ನ ಬಿಟ್ಟು ಉಳಿದವರನ್ನು ಸಿಬಿಐ ವಶಕ್ಕೆ ಪಡೆದಿತ್ತು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ 17 ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ನಿನ್ನೆ ಈ ಪ್ರಕರಣದ ಆರೋಪಿಗಳನ್ನು ಕೋರ್ಟ್ ದೋಷಿ ಎಂದು ತೀರ್ಪು ನೀಡಿತ್ತು. ಇಂದು ಅಪರಾಧಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ. 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಓರ್ವ ಆರೋಪಿ ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.
ಇನ್ನು ಟಿಂಕರಿಕರ್ ಕೊಲೆ ಪ್ರಕರಣದಲ್ಲಿ ಭಾಗಿಯಾಗದೇ ಇದ್ದರೂ, ಭ್ರಷ್ಟಾಚಾರ ಎಸಗಿದ್ದಾರೆ ಅನ್ನೋ ಆರೋಪ ಸಾಬೀತಾದ ಹಿನ್ನೆಲೆ ಕೋರ್ಟ್ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಇನ್ನುಳಿದಂತೆ ಬಸವರಾಜ್ ಮುತ್ತಗಿಗೆ ಮಾಫಿ ಸಾಕ್ಷಿ ಸ್ಥಾನ ಖಚಿತಪಡಿಸಿದೆ. ಮೃತ ಯೋಗೀಶ್ ಗೌಡ ಮಕ್ಕಳಿಗೆ 16 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಸೂಚನೆ ನೀಡಿದೆ.

ನೋಡಿರಿ

