ತಮಿಳುನಾಡಿಗೆ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ – ಆಗಸ್ಟ್ 3ಕ್ಕೆ ನಡೆಯೋ ಸಂಧಾನ ಸಭೆ ಸಕ್ಸಸ್ ಆಗುತ್ತಾ?

ರಾಜ್ಯದಲ್ಲಿ ತೀವ್ರ ಬರ ಸ್ಥಿತಿಯ ನಡುವೆಯೂ ತಮಿಳುನಾಡಿಗೆ ಮುಂದಿನ 15 ದಿನ 3,500 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೂಚಿಸಿದೆ. ಮತ್ತೊಂದೆಡೆ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಿಎಂ ವಿಜಯ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೂ ಮೊದಲೇ ತೀರ್ಮಾನಿಸಿದ್ದಂತೆ ಆಗಸ್ಟ್ 3ರ ಸಂಧಾನ ಸಭೆಗೆ ಕರ್ನಾಟಕ ಸಿದ್ಧತೆ ನಡೆಸಿದೆ.
ಇದನ್ನೂ ಓದಿ: ಲಂಕೆ ಗೆದ್ರಷ್ಟೇ WTC ಫೈನಲ್ – ಗಿಲ್ ಮುಂದೆ 9 ಪಂದ್ಯಗಳ ಟಾಸ್ಕ್!
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಭೆಯಲ್ಲಿ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದು, ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವ ಪ್ರಸ್ತಾವನೆ ಸೇರಿ ಮತ್ತಿತರ ನದಿ ನೀರು ಹಂಚಿಕೆ ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ತಮಿಳುನಾಡು ಸಿಎಂಜೊತೆ ಕೆಲ ಸಚಿವರುಗಳು ಸಹ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ ಕಾವೇರಿ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಸಂಬಂಧ ವಿಪಕ್ಷ ನಾಯಕ ಆರ್. ಅಶೋಕ್ ಅವರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ. ಆರ್. ಅಶೋಕ್ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಇರುವಾಗ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಬಿಡಲು ಒಪ್ಪಿರುವುದು ಕನ್ನಡಿಗರಿಗೆ ಬಗೆದ ದ್ರೋಹ. ಕಾಂಗ್ರೆಸ್ ಸರ್ಕಾರ ಹೈಕಮಾಂಡ್ ಮುಲಾಜಿಗೆ ಬಿದ್ದು, ತಮಿಳುನಾಡಿನ ಮೈತ್ರಿ ಸರ್ಕಾರವನ್ನು ಮೆಚ್ಚಿಸಲು ಕಾವೇರಿಯ ಮಡಿಲನ್ನು ಬರಿದು ಮಾಡುತ್ತಿದ್ದಾರೆ ಎಂದಿದ್ದಾರೆ.

ನೋಡಿರಿ

