ಹನೂರು ಫೈರಿಂಗ್‌ ಕೇಸ್‌ಗೆ ಬಿಗ್ ಟ್ವಿಸ್ಟ್ – CIDಗೆ ಪ್ರಕರಣ ವಹಿಸಿದ ರಾಜ್ಯ ಸರ್ಕಾರ

ಹನೂರು ಫೈರಿಂಗ್‌ ಕೇಸ್‌ಗೆ ಬಿಗ್ ಟ್ವಿಸ್ಟ್ – CIDಗೆ ಪ್ರಕರಣ ವಹಿಸಿದ ರಾಜ್ಯ ಸರ್ಕಾರ

ಹನೂರು ಫೈರಿಂಗ್‌ ಕೇಸ್‌ಗೆ ಬಿಗ್ ಸರ್ಕಾರ ಬಿಗ್ ಟ್ವಿಸ್ಟ್ ಕೊಟ್ಟಿದೆ.  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ ಸಲೀಂ ಅವರು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಆದೇಶಿಸಿದ್ದಾರೆ. ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ನಾಲ್ಕೂ ಎಫ್‌ಐಆರ್‌ಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ: ಭಿಕ್ಷುಕಿ ಮನೆಯಲ್ಲಿ 30 ಲಕ್ಷ ರೂಪಾಯಿ ಹಣ ಪತ್ತೆ – ದುಡ್ಡು ಹಂಚಿಕೊಂಡ ಲಜ್ಜೆಗೇಡಿ ಸಂಬಂಧಿಕರು

ಅರಣ್ಯ ಇಲಾಖೆ ಸಿಬ್ಬಂದಿಯ ಫೈರಿಂಗ್‌ಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಚಾಮರಾಜನಗರದ ರಾಮಪುರಂ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದರೆ, ಹನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ಮತ್ತೊಂದು ಪ್ರಕರಣ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ಈ ನಾಲ್ಕೂ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಲಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಸಿಐಡಿ ವಿಶೇಷ ಘಟಕ ನಡೆಸಲಿದೆ. ಗುಂಡಿನ ದಾಳಿ ನಡೆದ ಸಂದರ್ಭ, ಫೈರಿಂಗ್‌ಗೆ ಕಾರಣ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯ ಬಗ್ಗೆ ಸಿಐಡಿ ತನಿಖೆ ನಡೆಸುವ ಸಾಧ್ಯತೆಯಿದೆ. ಸರ್ಕಾರದ ಈ ನಿರ್ಧಾರದಿಂದ ಪ್ರಕರಣದ ತನಿಖೆ ಮತ್ತಷ್ಟು ಮಹತ್ವ ಪಡೆದುಕೊಂಡಿದ್ದು, ಸಿಐಡಿ ತನಿಖೆಯಲ್ಲಿ ಯಾವೆಲ್ಲ ಅಂಶಗಳು ಹೊರಬರಲಿವೆ ಎಂಬುದು ಕುತೂಹಲ ಮೂಡಿಸಿದೆ.

ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಆಗಸ್ಟ್ 14 ರಂದು ನಡೆಸಿದ್ದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಮೃತರನ್ನು ಹನೂರು ತಾಲೂಕಿನ ತೋಮಿಯರ್​ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲಾಗಿತ್ತು. ಇವರೆಲ್ಲ ಅರಣ್ಯ ಪ್ರದೇಶದಲ್ಲಿ ಕಾಡಿಗೆ ನುಗ್ಗಿ ಬೇಟೆಗಾರರು ಕಾಡುಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸುತ್ತಿದ್ದರು ಎಂಬ ಆರೋಪವಿದ್ದು, ಆ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಜತೆ ಸಂಭವಿಸಿದ ಸಂಘರ್ಷದಲ್ಲಿ ಗುಂಡಿನ ದಾಳಿಯಲ್ಲಿ ಹತರಾಗಿದ್ದಾರೆ.

Kishor KV

Leave a Reply

Your email address will not be published. Required fields are marked *