ಮೈಸೂರು ಬಳಿ ಭೀಕರ ಅಪಘಾತ! – ಬಸ್–ಲಾರಿ ಡಿಕ್ಕಿ, 4 ಮಂದಿ ಸಾವು!

ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಸ್ಲೀಪರ್ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಶುಕ್ರವಾರ ಮುಂಜಾನೆ ಈ ದುರ್ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ಗೆ, ಮಡಿಕೇರಿ ಕಡೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಮುಂಜಾನೆ ಸುಮಾರು 3.30ರ ವೇಳೆಗೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬಲವಂತವಾಗಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ – ಕೋಟೆನಾಡಿನಲ್ಲಿ ಇಬ್ಬರು ಮಂಗಳಮುಖಿಯರುಅರೆಸ್ಟ್
ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುಂಜಾನೆಯ ವೇಳೆ ಸಂಭವಿಸಿದ ಈ ದುರ್ಘಟನೆ ಪ್ರಯಾಣಿಕರ ಕುಟುಂಬಗಳಲ್ಲಿ ತೀವ್ರ ಆಘಾತ ಮೂಡಿಸಿದೆ.
ಅಪಘಾತದ ಮಾಹಿತಿ ತಿಳಿದು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಕೈಗೊಂಡಿದ್ದಾರೆ. ಗಾಯಗೊಂಡವರ ಆರೋಗ್ಯದ ಸ್ಥಿತಿ ಮತ್ತು ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನೋಡಿರಿ

