ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! – ಜಾಮೀನು ರದ್ದು.. 2 ವಾರಗಳಲ್ಲಿ ಶರಣಾಗಲು ಆದೇಶ!
ಶಾಸಕ ಸ್ಥಾನಕ್ಕೂ ಕುತ್ತು!

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜಾಮೀನಿನ ಮೇಲೆ ಹೊರಗಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನು ಮತ್ತು ಶಿಕ್ಷೆಯ ಅಮಾನತು ಆದೇಶವನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ, ಮುಂದಿನ 2 ವಾರಗಳ ಒಳಗಾಗಿ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಇದನ್ನೂ ಓದಿ: ರಾಮಾಯಣ ಸಿನಿಮಾ ಟಿಕೆಟ್ ಕೇವಲ 99 ರೂಪಾಯಿ – ಚಿತ್ರ ತಂಡದಿಂದಲೇ ವಿಶೇಷ ಆಫರ್
2026ರ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಗೆ ಕರ್ನಾಟಕ ಹೈಕೋರ್ಟ್ ಕಳೆದ ಜೂನ್‌ನಲ್ಲಿ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸಿಬಿಐ (CBI) ಮತ್ತು ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ ಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.
ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಶ್ರೀ ಚಂದ್ರಶೇಖರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಇಂದು ಈ ಮಹತ್ವದ ತೀರ್ಪು ಪ್ರಕಟಿಸಿದೆ. ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಬೇಲ್ ಬಾಂಡ್‌ಗಳನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, ಮುಂದಿನ ಎರಡು ವಾರಗಳ ಒಳಗಾಗಿ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ವಿನಯ್ ಕುಲಕರ್ಣಿ ಮತ್ತು ಇತರ ಅಪರಾಧಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಶಿಕ್ಷೆಗೆ ನೀಡಲಾಗಿದ್ದ ತಡೆಯಾಜ್ಞೆ ರದ್ದಾಗಿರುವುದರಿಂದ ವಿನಯ್ ಕುಲಕರ್ಣಿ ಅವರು ಮತ್ತೆ ಜೈಲು ಪಾಲಾಗುವುದರ ಜೊತೆಗೆ, ಅವರ ಧಾರವಾಡ ಶಾಸಕ ಸ್ಥಾನವೂ ಅನರ್ಹಗೊಳ್ಳುವ ಭೀತಿ ಎದುರಾಗಿದೆ.

ನೋಡಿರಿ
