ರೈತರಿಗೆ ನೀಡುವ ಬಡ್ಡಿ ರಹಿತ ಸಾಲದ ಮೊತ್ತ 3 ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಳ
ರೈತರಿಗಾಗಿ ಭೂಸಿರಿ ಎಂಬ ನೂತನ ಯೋಜನೆ ಜಾರಿ
ಅನ್ನದಾತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷದವರೆಗೂ ಸಾಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಕೃಷಿಕರಿಗೆ ಕೊಡುತ್ತಿದ್ದ ಬಡ್ಡಿ ರಹಿತ ಸಾಲ 3 ರಿಂದ 5 ಲಕ್ಷಕ್ಕೆ ಏರಿಕೆ ಮಾಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೊಷಿಸಿದ್ದಾರೆ.
ಸಹ್ಯಾದ್ರಿ ಯೋಜನೆಯಡಿಯಲ್ಲಿ ಕರಾವಳಿ ಮಲೆನಾಡು ಹಾಗೂ ಅರೆಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ, ಕಿಂಡಿ ನಾಳ ಅಭಿವೃದ್ಧಿ ಕಾಮಗಾರಿಗೆ 75 ಕೋಟಿ ರೂ. ಅನುದಾನ ಮೀಸಲಿಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.
ಇನ್ನೂ ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ 10, 930 ಕೋಟಿ ರೂಪಾಯಿ ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂಪಾಯಿ ಸೇರಿ ಒಟ್ಟಾರೆ 15,752 ಕೋಟಿ ರೂಪಾಯಿಗಳನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ನಲ್ಲಿ ಹೇಳಿದರು.
ಸಿಎಂ ಬೊಮ್ಮಾಯಿ ರೈತರಿಗಾಗಿ ಭೂಸಿರಿ ಎಂಬ ನೂತನ ಯೋಜನೆಯನ್ನು ಬಜೆಟ್ನಲ್ಲಿ ಘೋಷಿಸಿದ್ದಾರೆ. ಈ ಯೋಜನೆ ಅಡಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ, 10,000 ರೂ. ಹೆಚ್ಚಿನ ಸಹಾಯಧನ ನೀಡಲು ಉದ್ದೇಶಿಸಲಾಗಿದೆ. ಇದು ರೈತರು ಕ್ರಿಮಿನಾಶಕ, ರಸಗೊಬ್ಬರ, ಬೀಜ ಖರೀದಿಗೆ ಅನುಕೂಲಕರವಾಗಲಿದೆ. ರಾಜ್ಯ ಸರ್ಕಾರದ 2,500 ರೂ ಮತ್ತು ನಬಾರ್ಡ್ ಯೋಜನೆ ಅಡಿ ನೀಡುವ 2,500 ರೂ. ನೀಡಲಾಗುವುದು. ಇದು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ.
ದ್ರಾಕ್ಷಿ ಬೆಳೆಗಾರರಿಗೆ 100 ಕೋಟಿ ರೂ. ನೆರವು ಯೋಜನೆ ಆರಂಭಿಸಲಾಗುವುದು. ಜತೆಗೆ, ರೇಷ್ಮೆ ಬೆಳೆ 10 ಸಾವಿರ ಹೆಕ್ಟೇರ್ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು .
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಎಲೆ ಚುಕ್ಕಿ ರೋಗ ಸೇರಿದಂತೆ ಇನ್ನಿತರ ಹೊಸ ಹೊಸ ರೋಗಗಳನ್ನು ಅಡಿಕೆ ಕೃಷಿ ಎದುರಿಸುತ್ತಿದ್ದು, ಹೀಗಾಗಿ ಅಡಿಕೆ ಬೆಳೆಯನ್ನು ಬಾಧಿಸುವ ರೋಗಗಳ ನಿರ್ವಹಣೆಗೆ ನೂತನ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸುವ ಜೊತೆಗೆ ಉತ್ಪಾದಕತೆ ಹೆಚ್ಚಿಸುವ ಅಗತ್ಯತೆಯನ್ನು ಮನಗಂಡು ತೀರ್ಥಹಳ್ಳಿಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರಕ್ಕೆ 10 ಕೋಟಿ ರೂಪಾಯಿ ನೆರವನ್ನು ಘೋಷಿಸಿದ್ದಾರೆ.