ಬೊಮ್ಮಾಯಿ ವಿರುದ್ಧ ವಿನಯ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ – ಶಿಗ್ಗಾಂವಿಯಲ್ಲಿ ಏನೆಲ್ಲಾ ಲೆಕ್ಕಾಚಾರ..?
ವಿಧಾನಸಭಾ ಚುನಾವಣೆ ಹತ್ತಿರವಾದಂತೆಲ್ಲಾ ರಾಜ್ಯ ರಾಜಕೀಯ ಅಖಾಡ ರಂಗೇರುತ್ತಿದೆ. ಅಭ್ಯರ್ಥಿಗಳ ಆಯ್ಕೆ ಕಸರತ್ತು ಜೋರಾಗಿದೆ. ಅಲ್ಲದೆ ಕೆಲವು ಕ್ಷೇತ್ರಗಳಲ್ಲಿ ಘಟಾನುಘಟಿಗಳು ತೊಡೆ ತಟ್ಟುವುದು ಫೈನಲ್ ಕೂಡ ಆಗಿದೆ. ಇದೀಗ ಹಾಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ನಿಂದ ವಿನಯ್ ಕುಲಕರ್ಣಿ ಟಕ್ಕರ್ ಕೊಡಲು ರೆಡಿಯಾಗಿದ್ದಾರೆ.
ಯೋಗೇಶ್ ಗೌಡ ಹತ್ಯೆ ಕೇಸ್ನಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ. ಬೊಮ್ಮಾಯಿ ಸ್ಪರ್ಧಿಸುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಿಂದಲೇ ವಿನಯ್ ಕುಲಕರ್ಣಿ ಸ್ಪರ್ಧೆ ಮಾಡಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದರು ಎನ್ನಲಾಗಿದೆ. ಎಐಸಿಸಿ ಕಚೇರಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕುಲಕರ್ಣಿ ಅವರನ್ನು ಬೊಮ್ಮಾಯಿ ವಿರುದ್ಧ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯೂ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಎಐಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತಿತರರಿದ್ದರು.
ಇದನ್ನೂ ಓದಿ : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ – ಮೊದಲ ಪಟ್ಟಿಯಲ್ಲಿ ಯಾರಿಗೆಲ್ಲಾ ಸಿಕ್ಕಿದೆ ಟಿಕೆಟ್..?
ವಿನಯ್ ಕುಲಕರ್ಣಿಯನ್ನ ಅಖಾಡಕ್ಕೆ ಇಳಿಸೋ ಕಾಂಗ್ರೆಸ್ ನಿರ್ಧಾರದ ಹಿಂದೆ ದೊಡ್ಡ ತಂತ್ರವೇ ಅಡಗಿದೆ. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಆರೋಪದಲ್ಲಿ ಜೈಲು ಸೇರಿ ಜಾಮೀನು ಮೇಲೆ ಹೊರಬಂದಿರುವ ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ವಿನಯ್ ಆರ್ ಕುಲಕರ್ಣಿಯವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರವಾಗಿರುವ ಶಿಗ್ಗಾವಿ ಸ್ಪರ್ಧಿಸುವಂತೆ ಒತ್ತಡ ಹೇರಲಾಗುತ್ತಿದೆ. ಕೆಪಿಸಿಸಿ ಮೂಲಗಳ ಪ್ರಕಾರ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕುಲಕರ್ಣಿಗೆ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಪ್ರಬಲವಾಗಿದೆ ಮತ್ತು ಬಸವರಾಜ ಬೊಮ್ಮಾಯಿ, ಕುಲಕರ್ಣಿ ಇಬ್ಬರೂ ಲಿಂಗಾಯತರು. ಕಾಂಗ್ರೆಸ್ ಆಂತರಿಕ ಸಮೀಕ್ಷೆಯ ಪ್ರಕಾರ ವಿನಯ್ ಕುಲಕರ್ಣಿ ಬೊಮ್ಮಾಯಿಗೆ ಪ್ರಬಲ ಸ್ಪರ್ಧಿಯಾಗಲಿದ್ದಾರೆ ಎಂಬುದು ರಾಜ್ಯ ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ.