ಶ್ರವಣಬೆಳಗೊಳ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ
ಹಾಸನ: ಶ್ರವಣಬೆಳಗೊಳ ಮಠದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಮುಂಜಾನೆ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್ ನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ಕಳೆದ 4 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೆ ಶ್ರವಣಬೆಳಗೊಳದ ಜೈನ ಮಠಕ್ಕೆ ವೈದ್ಯರು ಆಗಮಿಸಿ ಪರೀಕ್ಷೆ ನಡೆಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ವಾಮೀಜಿ ಕೊನೆಯುಸಿರೆಳೆದಿದ್ದಾರೆ.
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು 1949ರ ಮೇ 3 ರಂದು ಜನಿಸಿದ್ದರು. ಮೂಲತಃ ಕಾರ್ಕಳದ ವರಂಗ ಗ್ರಾಮದವರು. 1970 ರಲ್ಲಿ ಜೈನ ಮಠದ ಪೀಠವೇರಿದ್ದ ಶ್ರೀಗಳು, ಇತಿಹಾಸ ತಜ್ಞ, ತತ್ವಜ್ಞಾನಿ, ಇತಿಹಾಸ, ಕನ್ನಡ, ಸಂಸ್ಕೃತ ದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪ್ರಾಕೃತ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1981ರ ಮಹಾಮಸ್ತಕಾಭಿಷೇಕ ಯಶಸ್ವಿಯಾಗಿ ನೆರವೇರಿಸಿದ್ದಕ್ಕೆ ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ಇವರಿಗೆ ಕರ್ಮಯೋಗಿ ಎಂದು ಬಿರುದು ನೀಡಿದ್ದರು.