ಮಾಡಾಳ್ ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ – ಬಿಜೆಪಿ ಶಾಸಕನ ಸಂಪತ್ತಿನ ಸತ್ಯ ಬಯಲಾಗುತ್ತಾ?
ಲಂಚ ಹಾಗೂ ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನನ್ನ ಐದು ದಿನ ಲೋಕಾಯುಕ್ತ ವಶಕ್ಕೆ ನೀಡಲಾಗಿದೆ.. ನಿನ್ನೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪನನ್ನ ಅರೆಸ್ಟ್ ಮಾಡಿದ್ದರು. ಇವತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಕೋರ್ಟ್ ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಆದೇಶ ನೀಡಿದೆ..
ಇದನ್ನೂ ಓದಿ : ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – ಮತ್ತೆ ನಾಪತ್ತೆಯಾದ ಬಿಜೆಪಿ ಶಾಸಕ..!
ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಮಂಗಳವಾರ ಆದೇಶ ನೀಡಿದೆ. ವಿರೂಪಾಕ್ಷಪ್ಪರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡಬೇಕು ಎಂದು ಲೋಕಾಯುಕ್ತ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದಕ್ಕೆ ಮಾಡಾಳ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಜತೆಗೆ ಮಾಡಾಳ್ ವಿರೂಪಾಕ್ಷಪ್ಪ ಅನಾರೋಗ್ಯ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದರು. ಅಂತಿಮವಾಗಿ ಜಡ್ಜ್ ಬಿ.ಜಯಂತ್ ಕುಮಾರ್ ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ಒಪ್ಪಿಸಿ ಆದೇಶ ನೀಡಿದರು.