ಪತ್ನಿ ವಿಜಯಲಕ್ಷ್ಮೀ ನಿವಾಸದಲ್ಲೇ ದರ್ಶನ್ ಅರೆಸ್ಟ್ – ಕಾಮಾಕ್ಷಿಪಾಳ್ಯ ಠಾಣೆಗೆ ಕರೆದೊಯ್ದ ಪೊಲೀಸ್

ಪತ್ನಿ ವಿಜಯಲಕ್ಷ್ಮೀ ನಿವಾಸದಲ್ಲೇ ದರ್ಶನ್ ಅರೆಸ್ಟ್ – ಕಾಮಾಕ್ಷಿಪಾಳ್ಯ ಠಾಣೆಗೆ ಕರೆದೊಯ್ದ ಪೊಲೀಸ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತು ಪವಿತ್ರಾ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದುಗೊಂಡಿದೆ. ಇದರ ಬೆನ್ನಲ್ಲೇ ಇದೀಗ ದರ್ಶನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮೊದಲು ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು.

ಬೇಲ್‌ ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಗುರುವಾರ (ಆಗಸ್ಟ್‌ 14) ಮಹತ್ವದ ತೀರ್ಪು ನೀಡಿ ತಕ್ಷಣ ಎಲ್ಲ ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದೆ. ಬೇಲ್‌ ರದ್ದಾಗಿರುವ ಬೆನ್ನಲ್ಲೇ ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು. ಇದೀಗ ಎ 2 ಆರೋಪಿ ದರ್ಶನ್‌ ಅವರನ್ನೂ ಬಂಧಿಸಲಾಗಿದೆ.

ಬೆಂಗಳೂರಿನ ಹೊಸಕೆರೆ ಹಳ್ಳಿಯಲ್ಲಿರುವ ವಿಜಯಲಕ್ಷ್ಮೀ ಅವರ ನಿವಾಸದಿಂದ ದರ್ಶನ್‌ನನ್ನು ಬಂಧಿಸಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕರೆದೊಯ್ದಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ದರ್ಶನ್‌ನನ್ನು ಕೋರ್ಟ್‌ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

2024ರ ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳಿಗೆ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ನ್ಯಾಪೀಠ ಹೇಳಿದೆ. ಹೈಕೋರ್ಟ್ ಆದೇಶಗಳ ಲೋಪವನ್ನು ಇದೇ ವೇಳೆ ಸುಪ್ರೀಂ ಕೋರ್ಟ್ ಎತ್ತಿ ತೋರಿಸಿತು. ಅಲ್ಲದೆ ಶೀಘ್ರವಾಗಿ ಸಾಕ್ಷಿಗಳ ವಿಚಾರಣೆ ನಡೆಸಲು ಆದೇಶ ಹೊರಡಿಸಿದೆ.

Kishor KV