ರಾಜ್ಯ ವಿಧಾನಸಭಾ ಚುನಾವಣೆ: ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ
ಹಾವೇರಿ: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ರಿಲೀಸ್ ಮಾಡಿದೆ. ಇದೀಗ ಅಭ್ಯರ್ಥಿಗಳು ಒಬ್ಬೊಬ್ಬರಾಗಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈಗ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರಿನಿಂದ ಶಿಗ್ಗಾಂವಿಗೆ ಶನಿವಾರ ಆಗಮಿಸಿದ ಸಿಎಂ ಬೊಮ್ಮಾಯಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ಶಿವಕುಮಾರ್ ಉದಾಸಿ, ಸಚಿವ ಸಿ.ಸಿ ಪಾಟೀಲ್, ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡರು ಮತ್ತು ಕುಟುಂಬಸ್ಥರು ಸಿಎಂ ಬೊಮ್ಮಾಯಿಗೆ ಸಾಥ್ ನೀಡಿದರು.
ಇದನ್ನೂ ಓದಿ: ನಾಳೆಯಿಂದ ರಾಹುಲ್ ಗಾಂಧಿ 2 ದಿನ ರಾಜ್ಯ ಪ್ರವಾಸ – ಅನರ್ಹತೆ ಬಗ್ಗೆ ಕೋಲಾರದಲ್ಲೇ ಉತ್ತರ ಕೊಡ್ತಾರಾ ರಾಗಾ?
ನಾಮಪತ್ರ ಸಲ್ಲಿಕೆಗೂ ಮುನ್ನ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ್ದ ಸಿಎಂ ಬೊಮ್ಮಾಯಿ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಂತರ ಅಮರಗೋಳದಲ್ಲಿನ ತಂದೆ ತಾಯಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಶಿಗ್ಗಾಂವಿಗೆ ಆಗಮಿಸಿದ್ದರು. ಶಿಗ್ಗಾಂವಿ ಪುರಸಭೆ ಬಳಿಯ ಚನ್ನಮ್ಮ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಜೊತೆಗೆ ಗ್ರಾಮ ದೇವತೆ ದರ್ಶನ ಪಡೆದು ನಾಮಪತ್ರ ಸಲ್ಲಿಸಲು ತಹಶೀಲ್ದಾರ್ ಕಚೇರಿಗೆ ತೆರಳಿದರು.
ನಾಮಪತ್ರ ಸಲ್ಲಿಸಿದ ನಂತರ ವಿವಿಧೆಡೆ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಎಲ್ಲಾ ಜಿಲ್ಲಾ ಪಂಚಾಯಿತಿ ಮತಕ್ಷೇತ್ರಗಳ ಮುಖಂಡರ ಸಭೆ ನಡೆಸಲಿದ್ದಾರೆ. ಹುರುಳಿಕುಪ್ಪಿ, ಕಾರಡಗಿ, ತಡಸ, ಧುಂಡಸಿ, ಹುಲುಗೂರು, ಕುಂದೂರು, ಜಿಲ್ಲಾ ಪಂಚಾಯಿತಿ ವ್ಯಾಪ್ತಿ ಮುಖಂಡರ ಜೊತೆ ಸಿಎಂ ಸಭೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಇನ್ನು ಅಭ್ಯರ್ಥಿಯ ಹುಡುಕಾಟ ಆರಂಭಿಸಿದ್ದರೆ, ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಸುವ ಮೂಲಕ ತಮ್ಮ ಚುನಾವಣೆಯ ಪ್ರಚಾರ ಆರಂಭಿಸಿದ್ದಾರೆ.