ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ

ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶಾಲಾ ಪಠ್ಯ ಪರಿಷ್ಕರಣೆಗೆ ಮುಂದಾಗಿದೆ. ಈ ಸಂಬಂಧ ಸಾಹಿತಿ ಬರಗೂರು ರಾಮಚಂದ್ರಪ್ಪ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದರು. ಆದರೆ ಇದೀಗ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪುಸ್ತಕ ಪರಿಷ್ಕರಣೆಯಿಂದ ಹಿಂದೆ ಸರಿದಿದ್ದಾರೆ.

ಈ ಬಗ್ಗೆ ಮಾತನಾಡಿದ ಬರಗೂರು ರಾಮಚಂದ್ರಪ್ಪ, ನಾನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷನಾಗಿಲ್ಲ. ಪಠ್ಯ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ. ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷನಾಗಲು ನಾನು ಒಪ್ಪಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆಗೆ ಸಿದ್ಧವಾಯ್ತು ಸಮಿತಿ – ಸೂಲಿಬೆಲೆ ಪಾಠಕ್ಕೆ ಕತ್ತರಿ?

ರಾಜ್ಯ ಸರ್ಕಾರ ಆರೆಸ್ಸೆಸ್‌ ಸಂಸ್ಥಾಪಕ ಕೇಶವ ಬಲಿರಾಮ್‌ ಹೆಡಗೇವಾರ್‌, ಚಿಂತಕ ಚಕ್ರವರ್ತಿ ಸೂಲಿಬೆಲೆ ಮತ್ತು ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯಗಳೂ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ, ಆಕ್ಷೇಪ ಕೇಳಿಬಂದಿರುವ ಅಧ್ಯಾಯಗಳನ್ನು ಕೈಬಿಡಲು ನಿರ್ಧರಿಸಿದೆ. ಆದರೆ, 2023-24ನೇ ಶೈಕ್ಷಣಿಕ ಸಾಲಿಗೆ ಈಗಾಗಲೇ ಬಹುತೇಕ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕಗಳು ಮುದ್ರಣವಾಗಿ ಶಾಲೆಗಳನ್ನು ತಲುಪಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯ ಮುದ್ರಿಸುವ ಪ್ರಕ್ರಿಯೆಗೆ ಕೈಹಾಕುವುದಿಲ್ಲ. ಬದಲಾಗಿ, ವಿತರಿಸಲಾಗಿರುವ ಪಠ್ಯದಲ್ಲಿ ವಿವಾದಿತ ಹಾಗೂ ಆಕ್ಷೇಪಣೆ ಕೇಳಿಬಂದಿರುವ ಪಾಠಗಳನ್ನು ಪಟ್ಟಿಮಾಡಿ, ಅವುಗಳನ್ನು ಮಕ್ಕಳಿಗೆ ಬೋಧನೆ ಮಾಡದಂತೆ ಶಾಲೆಗಳಿಗೆ ಸುತ್ತೋಲೆ ಹೊರಡಿಸಲು ತೀರ್ಮಾನಿಸಿದೆ. ಆದರೆ, ಈ ವಿಚಾರವನ್ನು ಮುಂದಿನ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಚರ್ಚಿಸಿ ಅನಂತರ ಅಧಿಕೃತವಾಗಿ ಪ್ರಕಟಿಸಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ನಗರದ ಶಕ್ತಿ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, 2017ನೇ ಸಾಲಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮುಖ್ಯಸ್ಥರಾಗಿದ್ದ ಸಾಹಿತಿ ಬರಗೂರು ರಾಮಚಂದ್ರಪ್ಪ, ಶಿಕ್ಷಣ ತಜ್ಞ ನಿರಂಜನಾರಾಧ್ಯ ಸೇರಿದಂತೆ ವಿವಿಧ ಶಿಕ್ಷಣ ತಜ್ಞರು ಹಾಗೂ ಸಾಹಿತಿಗಳು, ಅಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಈ ಸಾಲಿನ ಮಟ್ಟಿಗೆ ವಿವಾದಿತ ಹಾಗೂ ಆಕ್ಷೇಪಣೆಗಳಿರುವ ಪಠ್ಯಗಳನ್ನು ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಲಾಗಿದೆ. ಮುಂದಿನ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಈ ವಿಷಯ ಚರ್ಚಿಸಿ ಅಧಿಕೃತ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

suddiyaana