ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್ – ಇಡಿ ಪ್ರಕರಣವನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್!
ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಡಿಕೆಶಿ ಜಾರಿ ನಿರ್ದೇಶನಾಲಯದ ತನಿಖೆಯಿಂದ ನಿರಾಳರಾಗುವಂತಾಗಿದೆ.
ಇದನ್ನೂ ಓದಿ: ಉತ್ತರ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ – ಕೇರಳ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ
2017ರ ಆಗಸ್ಟ್‌ನಲ್ಲಿ ದಿಲ್ಲಿಯಲ್ಲಿರುವ ಅವರ ಫ್ಲಾಟ್‌ಗಳಲ್ಲಿ ಲೆಕ್ಕಕ್ಕೆ ಸಿಗದ ಹಣ ಸಿಕ್ಕಿತ್ತು. ಈ ಹಿನ್ನೆಲೆ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 120 B ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿತ್ತು. ಇದರ ಬೆನ್ನಲ್ಲಿಯೇ ಇಡಿ ಸಮನ್ಸ್ ಅನ್ನು ರದ್ದುಪಡಿಸಲು ಡಿಕೆಶಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಇಡಿ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿತ್ತು. ಹೈಕೋರ್ಟ್‌ನ ನಿರ್ಧಾರ ಪ್ರಶ್ನಿಸಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಪ್ರಕರಣವನ್ನು ರದ್ದುಗೊಳಿಸಲು ಆದೇಶಿಸಿದೆ.
ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ನಲ್ಲಿ ಆದೇಶವನ್ನು ಮರುಪರಿಶೀಲಿಸಲು ಮನವಿ ಮಾಡಿದೆ. ಒಂದು ವೇಳೆ ಮರುಪರಿಶೀಲನಾ ಮನವಿಯನ್ನು ಅಂಗೀಕರಿಸಿದರೆ, ಮತ್ತೆ ಇಡಿಯಿಂದ ತನಿಖೆ ಮುಂದುವರಿಯುವ ಸಾಧ್ಯತೆ ಇದೆ.