ಕಾವೇರಿ ನದಿ ನೀರು ವಿಚಾರವಾಗಿ ಕರ್ನಾಟಕಕ್ಕೆ ಬಿಗ್ ಶಾಕ್ – 15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ಸಂಬಂಧ ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದೆ. ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಕನ್ನಡ ನಾಡಿನಲ್ಲಿ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿಯೂ ತಮಿಳುನಾಡು ನಮಗೆ ಸಾಮಾನ್ಯ ವರ್ಷಗಳಂತೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದು, ಕರ್ನಾಟಕ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಬಗ್ಗೆ ಕರ್ನಾಟಕ ಹಾಗೂ ತಮಿಳುನಾಡು ಪರ ವಕೀಲರು ಪರಸ್ಪರ ವಾದ ಮಂಡಿಸಿದ್ದಾರೆ. ಪರಸ್ಪರ ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ಹೊರಡಿಸಿದೆ. ಇದಾದ ನಂತರ ನೀರಿನ ಲಭ್ಯತೆಯ ವಾಸ್ತವಾಂಶವನ್ನು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳಿಗೊಮ್ಮೆ ಸಭೆಯನ್ನು ಮಾಡಬೇಕು. ಎರಡೂ ರಾಜ್ಯಗಳು ಪ್ರಾಧಿಕಾರದ ಆದೇಶವನ್ನು ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗವಾಯ್ ಆದೇಶ ಹೊರಡಿಸಿದ್ದಾರೆ.
ಬುಧವಾರ ದೆಹಲಿಯಲ್ಲಿ ಕರ್ನಾಟಕ ಸರ್ಕಾರ ಸರ್ವಪಕ್ಷ ಸಭೆ ನಡೆಸಿತ್ತು. ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, ರಾಜ್ಯದ ಬರ ಸ್ಥಿತಿ ಹಾಗೂ ಸದ್ಯಕ್ಕೆ ತಮಿಳುನಾಡಿಗೆ ಹರಿಸಲು ನೀರಿನ ಕೊರತೆಯಾಗಿರುವ ಬಗ್ಗೆ ಗಮನಕ್ಕೆ ತಂದಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರ ಮದ್ಯ ಪ್ರವೇಶಿಸಬೇಕೆಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಮುಂದಿನ 1 ವಾರಗಳ ಕಾಲ ಭಾರಿ ಮಳೆ ಸಾಧ್ಯತೆ – ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
ಸಿಎಂ ಸಿದ್ದರಾಮಯ್ಯ ನೇತೃತ್ವದ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿತು. ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವರು ಹಾಗೂ ಸಂಸದರು ಕೆಲಹೊತ್ತು ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆಯನ್ನು ನಡೆಸಿದರು. ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ರಾಜ್ಯದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚಲುವರಾಯಸ್ವಾಮಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ ಇದ್ದರು. ಜೊತೆಗೆ ಅಧಿಕಾರಿಗಳಾದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಮ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ನಿಯೋಗ ಆಗ್ರಹಿಸಲಿದೆ. ಈಗಾಗಲೇ ರಾಜ್ಯದಲ್ಲಿ 195 ತಾಲ್ಲೂಕುಗಳಲ್ಲಿ ತೀವ್ರ ಬರದ ಪರಿಸ್ಥಿತಿ ಇದೆ. ಜೀನನದಿಗಳಲ್ಲಿ ನೀರಿಗೆ ಅಭಾಯ ಎದುರಾಗಿದೆ. ಈ ವಿಚಾರವನ್ನು ಕೇಂದ್ರ ಸಚಿವರ ಗಮನಕ್ಕೆ ತರಲಿದ್ದಾರೆ. ಈ ನಡುವೆ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ 15 ದಿನಗಳ ಕಾಲ ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರನ್ನು ಕರ್ನಾಟಕವು ತಮಿಳುನಾಡಿಗೆ ಹರಿಸಬೇಕಾಗಿದೆ. ಆದರೆ ತಮಿಳುನಾಡಿಗೆ ನೀರು ಬಿಡಲು ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದೆ. ಈ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.