ಪಿಎಸ್ಐ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯಲ್ಲಿ ಬಿಗ್ ಟ್ವಿಸ್ಟ್ – ವಿಚಾರಣಾ ಆಯೋಗದಿಂದ ರಾಜಕಾರಣಿಗಳಿಗೆ ನೋಟಿಸ್

ಪಿಎಸ್ಐ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯಲ್ಲಿ ಬಿಗ್ ಟ್ವಿಸ್ಟ್ – ವಿಚಾರಣಾ ಆಯೋಗದಿಂದ ರಾಜಕಾರಣಿಗಳಿಗೆ ನೋಟಿಸ್

ಕರ್ನಾಟಕದಲ್ಲಿ ನಡೆದಿದ್ದ ಪಿಎಸ್​ಐ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದೆ. ರಾಜ್ಯ ಸರ್ಕಾರ ರಚಿಸಿದ್ದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ವಿಚಾರಣಾ ಆಯೋಗ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಹಲವು ರಾಜಕಾರಣಿಗಳಿಗೆ ನೋಟಿಸ್ ನೀಡಿದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ   ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವ ಅಶ್ವತ್ಥ್ ನಾರಾಯಣ ಹಾಗೂ ಅವರ ಸಹೋದರ ಮತ್ತು, ಮಾಜಿ ಶಾಸಕ ಬಸವರಾಜ್ ದಡೇಸೂಗುರು ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ ಯತ್ನಾಳ್ – 40 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರದ ಸ್ಫೋಟಕ ಹೇಳಿಕೆ

ಪಿಎಸ್ ಐ ನೇಮಕಾತಿ ವೇಳೆ ನಡೆದಿದ್ದ ಅಕ್ರಮದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಶಾಸಕರಾದ ಅಶ್ವತ್ಥ್ ನಾರಾಯಣ್, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಹೇಳಿಕೆ ನೀಡಿದ್ದರು. ಕೆಲ ರಾಜಕಾರಣಿಗಳು ಪಿಎಸ್‌ಐ ನೇಮಕಾತಿ ಅವ್ಯವಹಾರ ಪ್ರಕರಣ ಸಂಬಂಧ ತಮ್ಮ ಬಳಿ ಎಲ್ಲಾ ಮಾಹಿತಿ ಇದೆ ಎಂದು ಮಾಧ್ಯಮಗಳ ಮುಂದೆ ಹೇಳಿದ್ದರು. ಹೀಗಾಗಿ ವಕೀಲರು ವಿಡಿಯೋ ಸಮೇತ ಅಫಿಡವಿಟ್ ಸಲ್ಲಿಕೆ ಮಾಡಿದ್ದರು. ಹಾಗೇ ಅಭ್ಯರ್ಥಿಗಳು ಕೊಟ್ಟ ಮಾಹಿತಿ ಆಧರಿಸಿ ವಿಚಾರಣಾ ಆಯೋಗದಿಂದ ರಾಜಕಾರಣಿಗಳಿಗೆ ನೋಟಿಸ್ ನೀಡಲಾಗಿದೆ. ಪಿಎಸ್ಐ ಹಗರಣದ ಕುರಿತು ಮಾಹಿತಿ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡುವಂತೆ ಆಯೋಗ ಸೂಚನೆ ನೀಡಿತ್ತು. ಬುಧವಾರ ಆಯೋಗದ ಮುಂದೆ ಹಾಜರಾದ ನಾಯಕರು ತಮ್ಮ ಹೇಳಿಕೆ ದಾಖಲು ಮಾಡಿದ್ದಾರೆ.

2021ರ ಅಕ್ಟೋಬರ್ 3ರಂದು 545 ಪಿಎಸ್​ಐ ಹುದ್ದೆಗಳ ನೇಮಕಾತಿಗಾಗಿ ರಾಜ್ಯಾದ್ಯಂತ ಹಲವು ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಸುಮಾರು 54,041 ವಿದ್ಯಾರ್ಥಿಗಳು ಹಾಜರಾಗಿದ್ದರು. ಆದ್ರೆ ಈ ಪರೀಕ್ಷೆಯಲ್ಲಿ ಲಕ್ಷ ಲಕ್ಷ ಹಣ ಪಡೆದು ಕೆಲವೊಂದು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಸಹಾಯ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ 52 ಅಭ್ಯರ್ಥಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು. ಆರೋಪಿ ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆ ಬರೆದಿರುವುದು ದೃಢಪಟ್ಟಿತ್ತು. ಹೀಗಾಗಿ ಕರ್ನಾಟಕ ನಾಗರಿಕ ಸೇವೆಗಳು ನಿಯಮಗಳ ಪ್ರಕಾರ ಪೊಲೀಸ್‌ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸದಂತೆ ಆರೋಪಿಯ ಅಭ್ಯರ್ಥಿಗಳಿಗೆ ಶಾಶ್ವತವಾಗಿ ನಿಷೇಧಿಸಲಾಗಿದೆ.  ಮತ್ತೊಂದೆಡೆ ಈ ಅಕ್ರಮದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದನ್ನ ಬಯಲಿಗೆಳೆಯಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.

Sulekha