ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ – ‘ಯಡಿಯೂರಪ್ಪ ರೆಸ್ಟ್ ತೆಗೆದುಕೊಳ್ಳಲಿ’ ಎಂದು ಡಿಕೆಶಿ ಟಾಂಗ್..!

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ – ‘ಯಡಿಯೂರಪ್ಪ ರೆಸ್ಟ್ ತೆಗೆದುಕೊಳ್ಳಲಿ’ ಎಂದು ಡಿಕೆಶಿ ಟಾಂಗ್..!

ಬೆಂಗಳೂರು: ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿರುವ ಐದು ಗ್ಯಾರಂಟಿಗಳ ಜಾರಿ ವಿಳಂಬ, ಗ್ಯಾರಂಟಿಗಳಿಗೆ ವಿಧಿಸಿರುವ ಷರತ್ತುಗಳು, ಗೋ ಹತ್ಯೆ ಮತ್ತು ಮತಾಂತರ ಕಾಯ್ದೆಯನ್ನು ವಾಪಾಸ್ ಪಡೆಯುತ್ತಿರುವ ಬಗ್ಗೆ ವಿರೋಧಿಸಿ ಮಂಗಳವಾರ ಫ್ರೀಡಂ ಪಾರ್ಕ್​ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಮಾತ್ರ ಜಾರಿಗೊಂಡಿದೆ. ಇನ್ನು ಅನ್ನಭಾಗ್ಯ ಯೋಜನೆ ಜಾರಿಗೊಂಡರೂ ಅಕ್ಕಿ ಬದಲಾಗಿ ಫಲಾನುಭವಿಗಳಿಗೆ ಹಣ ನೀಡಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರದ ಐದು ಕೆಜಿ ಅಕ್ಕಿ ಹೊರತಾಗಿ ಕಾಂಗ್ರೆಸ್ ಘೋಷಣೆ ಮಾಡಿದ್ದ ಹತ್ತು ಕೆಜಿ ಅಕ್ಕಿಯ ಹಣ ಕೊಡಬೇಕು ಎಂದು ಬಿಜೆಪಿ ನಾಯಕರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: ಎರಡನೇ ದಿನ ಅಧಿವೇಶನದಲ್ಲಿ ಬಿಜೆಪಿ ಸದಸ್ಯರ ಗಲಾಟೆ – ಪ್ರತಿಪಕ್ಷಗಳಿಗೆ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳದ್ದೆ ಚಿಂತೆ..!

ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದ ನಳಿನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ ಸೇರಿದಂತೆ ಮಾಜಿ ಸಚಿವರು , ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪ್ರತಿಭಟನೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ‌ಕಟೀಲ್​ ಭಾಷಣ ಮಾಡಿ ‘ಜನರಿಗೆ ಸುಳ್ಳು ಹೇಳಿ, ಐದು ಗ್ಯಾರಂಟಿ ಕಾರ್ಡ್ ಗಳನ್ನ ಹಂಚಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸರ್ಕಾರ ರಚನೆಯಾದ 24 ಗಂಟೆಯೊಳಗೆ ಜನರಿಗೆ ತಲುಪಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಇಂದಿನವರೆಗೆ ಜನರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ವಿಫಲವಾಗಿದ್ದರೆ ಎಂದಿದ್ದಾರೆ.

ಇನ್ನು ಸದನದಲ್ಲೂ ಆಡಳಿತ ಪಕ್ಷದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ವಿಧಾನಸಭೆ ಕಲಾಪ ಪುನಾರಂಭವಾಗುತ್ತಿದ್ದಂತೆ ಸದನದ ಬಾವಿಗಿಳಿದು ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದಾರೆ. ದ್ರೋಹ ದ್ರೋಹ ಕಾಂಗ್ರೆಸ್ ದ್ರೋಹ ಎಂದು ಬಿಜೆಪಿ ಘೋಷಣೆ ಮಾಡುತ್ತಿದ್ದರೆ, ಇತ್ತ ಕಾಂಗ್ರೆಸ್ ಶಾಸಕರು ಬಿಜೆಪಿ ವಿರುದ್ದ ಘೋಷಣೆ​ ಕೂಗುತ್ತಿದ್ದಾರೆ. ಬಿಜೆಪಿ ನಾಯಕ ಗದ್ದಲ ಹೆಚ್ಚಾದಂತೆ ಸದನವನ್ನು ಎರಡು ಬಾರಿ ಮುಂದೂಡಲಾಗಿತ್ತು.

ರಾಜ್ಯ ಸರ್ಕಾರದ ವಿರುದ್ಧ ಹೆಚ್​ ಡಿ ಕುಮಾರಸ್ವಾಮಿ ಕಮಿಷನ್​ ಆರೋಪ ಮಾಡಿದ್ದಾರೆ. ಈ ವಿಚಾರವಾಗ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಹೇಳಿಕೆಗೆ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.

ಬಿಜೆಪಿ ಪ್ರತಿಭಟನೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಯಡಿಯೂರಪ್ಪ ಅವರಿಗೆ ಒಳ್ಳೆಯದು ಆಗಲಿ. ನಮ್ಮ ಗ್ಯಾರಂಟಿಯನ್ನು ಒಳ್ಳೆಯ ಪ್ರಚಾರ ಮಾಡ್ತಾ ಇದ್ದಾರೆ. ನಮ್ಮಿಂದ ತಪ್ಪಾಗಿದ್ರೆ ಸಲಹೆ ಕೊಡಲಿ ಸರಿ ಮಾಡಿಕೊಳ್ತೀವಿ ಯಡಿಯೂರಪ್ಪ ಅವರಿಗೆ ಜನ ರೆಸ್ಟ್ ಕೊಟ್ಟಿದ್ದಾರೆ. ಹೀಗಾಗಿ ಅವರು ರೆಸ್ಟ್ ತೆಗೆದುಕೊಳ್ಳಲಿ. ಸುಮ್ಮನೆ ಆರೋಪ ಮಾಡೋದು ಸರಿ ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ.

suddiyaana