ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಸಿದ್ದರಾಮಯ್ಯ ಪ್ರೇರಣೆಯೇ ಕಾರಣ – ಸಿಎಂ ಆಯ್ಕೆ ಹೊತ್ತಲ್ಲೇ ಡಾ.ಕೆ.ಸುಧಾಕರ್ ಟ್ವೀಟ್ ಬಾಂಬ್!
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಸಿಎಂ ಆಯ್ಕೆ ಪ್ರಕ್ರಿಯೆ ಕಗ್ಗಂಟಾಗಿರುವ ಹೊತ್ತಿನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಕೆ.ಸುಧಾಕರ್ ಗಂಭೀರ ಆರೋಪ ಮಾಡಿದ್ದಾರೆ. ಬುಧವಾರ ಬೆಳಿಗ್ಗೆ ಸರಣಿ ಟ್ವೀಟ್ ಮಾಡಿರುವ ಡಾ.ಕೆ.ಸುಧಾಕರ್, ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರುವ ನಮ್ಮ ನಡೆಯಲ್ಲಿ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಆಗಬೇಕು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿರುವಾಗಲೇ ಡಾ.ಕೆ.ಸುಧಾಕರ್ ಮಾಡಿರುವ ಟ್ವೀಟ್ ಕುತೂಹಲ ಮೂಡಿಸಿದೆ. ಮೂರು ಟ್ವೀಟ್ ಗಳಲ್ಲೂ ಸಮ್ಮಿಶ್ರ ಸರ್ಕಾರ ಉರುಳಲು ಸಿದ್ದರಾಮಯ್ಯ ಕಾರಣ ಎಂದು ಡಾ.ಕೆ.ಸುಧಾಕರ್ ಆರೋಪ ಮಾಡಿರುವುದರಿಂದ ಕಾಂಗ್ರೆಸ್ ಹೈಕಮಾಂಡ್ ಈಗ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುತ್ತದಾ ಎಂಬ ಪ್ರಶ್ನೆ ಮೂಡುವಂತೆ ಆಗಿದೆ.
ಇದನ್ನೂ ಓದಿ: ಇಂದು ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ – ಕಾಂಗ್ರೆಸ್ ಹೈಕಮಾಂಡ್ ಗೆ ಕಗ್ಗಂಟಾಗಿರುವುದು ಏನು?
‘2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು’ ಎಂದು ಡಾ.ಕೆ. ಸುಧಾಕರ್ ಆರೋಪ ಮಾಡಿದ್ದಾರೆ.
ʼ2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು ಎಂದು ಹೇಳಿದ್ದಾರೆ
ಡಾ.ಕೆ.ಸುಧಾಕರ್ ಮಾಡಿರುವ ಸರಣಿ ಟ್ವೀಟ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಅನುಕೂಲ ಮಾಡಿಕೊಡುತ್ತದಾ ಎಂದು ನೋಡಬೇಕಿದೆ.
2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.
1/3
— Dr Sudhakar K (@mla_sudhakar) May 17, 2023