ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಕ್ಯಾಂಟರ್ ಪಲ್ಟಿ – 12 ಭಕ್ತರು ಸ್ಥಳದಲ್ಲೇ ಸಾ*ವು

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಕ್ಯಾಂಟರ್ ಉರುಳಿಬಿದ್ದ ಪರಿಣಾಮ 12 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 16ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಪೂರ್ವ ಪೆರಿಫೆರಲ್ ಎಕ್ಸ್ಪ್ರೆಸ್ವೇಯಲ್ಲಿ ಈ ದುರ್ಘಟನೆ ನಡೆದಿದೆ. ರಾಜಸ್ಥಾನದ ಬಗದ್ ಧಾಮ್ಗೆ ತೀರ್ಥಯಾತ್ರೆ ತೆರಳಿದ್ದ ಯಾತ್ರಿಕರು, ಯಾತ್ರೆ ಮುಗಿಸಿಕೊಂಡು ಬುಡೌನ್ಗೆ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಕ್ಯಾಂಟರ್ ವೇಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಉರುಳಿಬಿದ್ದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕ್ಯಾಂಟರ್ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯಕ್ಕೆ ಮುಂದಾಗಿ, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ಸೋತ್ರೂ PAK ನಾಯಕಿ ದೌಲತ್ತು – ಸೆಂಡ್ ಆಫ್ ಫಾತಿಮಾ ಟ್ರೋಲ್
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಾಲಕನ ಅಜಾಗರೂಕತೆ, ಅತಿವೇಗ ಅಥವಾ ವಾಹನದ ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣವಾಗಿದೆಯೇ ಎಂಬುದನ್ನು ತನಿಖೆಯ ಬಳಿಕವೇ ಖಚಿತಪಡಿಸಬೇಕಿದೆ.
ತೀರ್ಥಯಾತ್ರೆಯಿಂದ ಸಂತೋಷದಿಂದ ಮನೆಗೆ ಮರಳಬೇಕಿದ್ದ ಕುಟುಂಬಗಳಿಗೆ ಈ ದುರ್ಘಟನೆ ದೊಡ್ಡ ಆಘಾತವನ್ನುಂಟುಮಾಡಿದೆ.

ನೋಡಿರಿ

