ಸರ್ಕಾರಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಬೆದರಿಕೆ ಆರೋಪ – ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಬಂಧನದ ಭೀತಿ!
ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಪ್ರಕರಣ?
ಅರಣ್ಯ ಭೂಮಿಯ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಕಾರಣವಾಗಿದ್ದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ -ಕೆದ್ದ ನಿವಾಸಿ ಲೋಲಾಕ್ಷ ಎಂಬುವವರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು. ಈ ಹಿನ್ನೆಲೆ ಅ.6 ರಂದು ಅರಣ್ಯ ಇಲಾಖೆ ಸಿಬ್ಬಂದಿ ನೂತನ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು. ಘಟನೆ ವಿಚಾರ ತಿಳಿದು ಶಾಸಕ ಹರೀಶ್ ಪೂಂಜ ಅಕ್ಟೋಬರ್ 7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಧಿಕಾರಿಗಳಿಗೆ ಹಿಗ್ಗ ಮಗ್ಗವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಸರ್ಕಾರಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಹಿನ್ನೆಲೆ ಶಾಸಕ ಹರೀಶ್ ಪೂಂಜಾ ಹಾಗೂ 11 ಮಂದಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಗಾಜಾ ಆಸ್ಪತ್ರೆ ಮೇಲಿನ ವೈಮಾನಿಕ ದಾಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಸಾವು – ದಾಳಿ ಮಾಡಿದವರು ಇಸ್ರೇಲಿಗರಲ್ಲವಾ?
ವಲಯ ಅರಣ್ಯಾಧಿಕಾರಿಗಳನ್ನು ಅಸಂಸದೀಯ ಪದಗಳಿಂದ ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರೆ. ಅಷ್ಟೇ ಅಲ್ಲದೇ ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾ ಹಾಗೂ ಅವರ ಬೆಂಬಲಿಗರ ವಿರುದ್ಧ ದೂರು ನೀಡಿದ್ದಾರೆ.